ಬೆಳಗಾವಿ: ಲೋಕಸಭಾ ಚುನಾವಣಾ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದೆ. ರಾಜಕೀಯ ನಾಯಕರು ಅಬ್ಬರದ ಪ್ರಚಾರ ನಡೆಸುವ ಬರದಲ್ಲಿ ಮಾತಿನ ಹಿಡಿತ ತಪ್ಪುತ್ತಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ವಾಗ್ದಾಳಿ ನಡೆಸುವ ಬರದಲ್ಲಿ ಮಾಜಿ ಶಾಸಕ ಸಂಜಯ್ ಪಾಟೀಲ್ ವಿವಾದ ಸೃಷ್ಟಿಸಿದ್ದಾರೆ.
ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಪರ ಭರ್ಜರಿ ಪ್ರಚಾರ ನಡೆಸಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಮೊದಲ ಬಾರಿಗೆ ರಮೇಶ್ ಜಾರಕಿಹೊಳಿ ಭದ್ರ ಕೋಟೆ ಎಂದೇ ಹೇಳಲಾಗುವ ಗೋಕಾಕ್, ಅರಬಾವಿ ಕ್ಷೇತ್ರಗಳಲ್ಲಿ ವಾಸ್ತವ್ಯ ಹೂಡಿ ಮತಯಾಚನೆ ಮಾಡಿದ್ದಾರೆ. ಇಷ್ಟು ದಿನ ಚುನವಣಾ ಪ್ರಚಾರದಿಂದ ದೂರ ಉಳಿದಿದ್ದ ರಮೇಶ್ ಜಾರಕಿಹೊಳಿ ಇದೀಗ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಆರಂಭಿಸಿದ್ದು, ಮೊದಲ ದಿನವೇ ಲಕ್ಷ್ಮೀ ಹೆಬ್ಬಾಳ್ಕರ್ ಕ್ಷೇತ್ರದಿಂದ ಅಬ್ಬರದ ಪ್ರಚಾರ ನಡೆಸಿದ್ದಾರೆ.
ಹಿಂಡಲಗಾ ಗ್ರಾಮದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಬಿಜೆಪಿ ಅಭ್ಯರ್ಥಿಗೆ ಮತ ನೀಡಿ, ಮತ್ತೊಮ್ಮೆ ಮೋದಿಯವರನ್ನು ಪ್ರಧಾನಿ ಮಾಡಿ ಎಂದಷ್ಟೇ ಭಾಷಣ ಮಾಡಿದ ರಮೇಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಮಾತನಾಡಿಲ್ಲ. ಆದರೆ ತನ್ನ ಬೆಂಬಲಿಗರ ಮೂಲಕ ಸಚಿವೆ ಹೆಬ್ಬಾಳ್ಕರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸಮಾವೇಶದಲ್ಲಿ ಮಾತನಾಡಿದ ಮಾಜಿ ಶಾಸಕ ಸಂಜಯ್ ಪಾಟೀಲ್, ಲಕ್ಷ್ಮೀ ಹೆಬ್ಬಾಳ್ಕರ್ ಕ್ಷೇತ್ರದಲ್ಲಿ ಅತಿ ಹೆಚ್ಚು ಮಹಿಳೆಯರೇ ಸಮಾವೇಶದಲ್ಲಿ ಭಾಗಿಯಾಗಿದ್ದಾರೆ. ಅದರಲ್ಲೂ ಇಂದು ರಮೇಶ್ ಜಾರಕಿಹೊಳಿ ಚುನಾವಣಾ ಪ್ರಚಾರಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಅಕ್ಕಾಬಾಯಿಗೆ ಇಂದು ರಾತ್ರಿ ನಿದ್ದೆ ಬರಲ್ಲ. ಮಾತ್ರೆ ಜೊತೆ ಒಂದು ಪೆಗ್ ಎಕ್ಸ್ಟ್ರಾ ಹಾಕಿಕೊಳ್ಳಬೇಕು ಎಂದು ಹೇಳುವ ಮೂಲಕ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಅಷ್ಟೇ ಅಲ್ಲ ಲಕ್ಷ್ಮೀ ಹೆಬ್ಬಾಳ್ಕರ್ ಒಂದು ಕಡೆ ಹಿಂದುತ್ವ ಜಪ ಮಾಡ್ತಾರೆ. ಮತ್ತೊಂದು ಕಡೆ ಟಿಪ್ಪು ಸುಲ್ತಾನ್ ಪರ ಮಾತನಾಡುತ್ತಾರೆ. ಈ ರೀತಿ ಡಬಲ್ ಸ್ಟ್ಯಾಂಡ್ ಯಾಕೆ? ಎಂದು ಕೇಳಿದ್ದಾರೆ. ಒಟ್ಟಾರೆ ಮಾಜಿ ಶಾಸಕ ಸಂಜಯ್ ಪಾಟೀಲ್ ಹೇಳಿಕೆ ತೀವ್ರ ವಿವಾದಕ್ಕೆ ಕಾರಣವಾಗಿದೆ.