ಹುಬ್ಬಳ್ಳಿ : ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಹಣ ತೆಗೆದುಕೊಂಡರೆ ಸೇವಾ ಕೇಂದ್ರಗಳ ಲೈಸೆನ್ಸ್ ರದ್ದು ಮಾಡುವುದಾಗಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಎಚ್ಚರಿಕೆ ನೀಡಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಯಾರೂ ಹಣ ಕೊಡಬೇಡಿ, ಇದಕ್ಕೆ ಹಣ ಪಡೆಯುವ ಹಾಗಿಲ್ಲ. ಕರ್ನಾಟಕದಲ್ಲಿ ಯಾರೇ ಹಣ ತೆಗೆದುಕೊಂಡರೂ ಸೇವಾ ಕೇಂದ್ರಗಳ ಲೈಸೆನ್ಸ್ ರದ್ದು ಮಾಡುವುದಾಗಿ ಸಚಿವ ಸಂತೋಷ್ ಲಾಡ್ ಎಚ್ಚರಿಕೆ ನೀಡಿದ್ದಾರೆ.
ಅದೇ ರೀತಿ ಗೃಹಲಕ್ಷ್ಮಿ ಯೋಜನೆಗೆ ಖಾಸಗಿ ಸೈಬರ್ ಕೇಂದ್ರಗಳಲ್ಲಿ ಅಕ್ರಮವಾಗಿ ಹಣ ಪಡೆದು ಅರ್ಜಿ ಸಲ್ಲಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ 3 ಸೈಬರ್ ಕೇಂದ್ರಗಳ ವಿರುದ್ಧ ಪ್ರಕರಣ ದಾಖಲಾದ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನಲ್ಲಿ ನಡೆದಿದೆ.ಮಾನ್ವಿ ತಾಲೂಕಿನ ಮೂರು ಖಾಸಗಿ ಸೈಬರ್ ಕೇಂದ್ರಗಳಲ್ಲಿ 100-200 ರೂಪಾಯಿ ಹಣ ಪಡೆದು ಗೃಹಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಸಲಾಗುತ್ತಿದೆ ಎಂಬ ಆರೋಪ ಹಿನ್ನೆಲೆಯಲ್ಲಿ ತಹಶೀಲ್ದಾರ್ ಚಂದ್ರಕಾಂತ್ ನೇತೃತ್ವದ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಸರ್ಕಾರದ ಐಡಿ ಹೆಸರಲ್ಲಿ ಅಕ್ರಮವಾಗಿ ಅರ್ಜಿ ಸಲ್ಲಿಸುತ್ತಿರುವುದು ಪತ್ತೆಯಾಗಿತ್ತು.
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಎಚ್ಚರಿಕೆ
ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಲು ಹಣ ಪಡೆಯುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕಠಿಣ ಕ್ರಮ ಜರುಗಿಸುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.ಬೆಳಗಾವಿಯಲ್ಲಿ ಮಾತನಾಡಿದ ಅವರು, ಹಣ ಪಡೆದವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು. ನಿನ್ನೆಯಿಂದ ನನಗೆ ಮೂರು ದೂರುಗಳು ಬಂದಿವೆ. ಯಾರಾದರೂ ಹಣ ಪಡೆದರೆ ಕ್ರಿಮಿನಲ್ ಕೇಸ್ ದಾಖಲಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಸಂಫೂರ್ಣ ಉಚಿತವಾಗಿದ್ದು, ಹಣ ವಸೂಲಿ ಮಾಡಿದವರ ಲಾಗಿನ್ ಐಡಿ, ಪಾಸ್ವರ್ಡ್ ರದ್ದು ಮಾಡಬೇಕೆಂದು ಸೂಚನೆ ನೀಡಲಾಗಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ