ಬೆಂಗಳೂರು: ರಾಜ್ಯದ 5 ಕಡೆ ಶ್ರಮಿಕ ಭವನಗಳನ್ನು ನಿರ್ಮಿಸಲಾಗುತ್ತಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.
ಇಂದು ಸದನದಲ್ಲಿ ಸದಸ್ಯರು ಕೇಳಿದ ಪ್ರಶ್ನೆಗಳಿಗೆ ಉತ್ತರ ನೀಡಿದ ಸಚಿವರು, ಈ ವರೆಗೆ ಬೆಂಗಳೂರು, ಗ್ರಾಮಾಂತರ, ಶಿವಮೊಗ್ಗ, ಬೆಳಗಾವಿ, ಕಲಬುರಗಿ ಹಾಗೂ ಚಾಮರಾಜನಗರಗಳಲ್ಲಿ ಶ್ರಮಿಕ ಭವನ ನಿರ್ಮಿಸಲಾಗುತ್ತಿದೆ. ಇವುಗಳಿಗಾಗಿ ಎರಡು ವರ್ಷಗಳಿಂದ 13.26 ಕೋಟಿ ರೂ. ಖರ್ಚು ಮಾಡಲಾಗಿದೆ. ಪ್ರಸ್ತುತ ಸಾಲಿನಲ್ಲಿ ಯಾವುದೇ ಹೊಸ ಶ್ರಮಿಕ ಭವನಗಳ ನಿರ್ಮಾಣ ಇಲ್ಲ ಎಂದು ತಿಳಿಸಿದ್ದಾರೆ.
ಕಟ್ಟಡ ಕಾರ್ಮಿಕರ ಸುರಕ್ಷತೆ ಹಾಗೂ ಕೆಲಸದ ಸ್ಥಳಗಳಲ್ಲಿ ಸಂಭವಿಸಬಹುದಾದ ಅವಘಡಗಳಿಂದ ಕಾರ್ಮಿಕರಿಗೆ ಉಂಟಾಗುವ ವಿಪತ್ತುಗಳ ನಿರ್ವಹಣೆ ಬಗ್ಗೆ ಮಾಹಿತಿ ನೀಡಿದ ಸಚಿವರು, ಈಗಾಗಲೇ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಕಟ್ಟಡ ಕಾರ್ಮಿಕರ ಸುರಕ್ಷತೆಗಾಗಿ ಹಲವು ಅನುಕೂಲಗಳನ್ನು ಮಾಡಿಕೊಡಲಾಗುತ್ತಿದೆ. ಅಲ್ಲದೇ ರಾಜ್ಯದ ಸುಮಾರು 45 ಲಕ್ಷ ನೋಂದಾಯಿತ ಕಟ್ಟಡ ಕಾರ್ಮಿಕರ ಪೈಕಿ ನಿಜವಾದ ಕಾರ್ಮಿಕರು ಯಾರು ಎಂಬ ಬಗ್ಗೆ ಮುಂದಿನ ದಿನಗಳಲ್ಲಿ ಪತ್ತೆಹಚ್ಚುವ ಕಾರ್ಯ ಮಾಡಲಾಗುವುದೆಂದು ತಿಳಿದ್ದಾರೆ.