ಬೆಳಗಾವಿ: ಬೆಳಗಾವಿ ಜಿಲ್ಲೆ ವಂಟಮೂರಿ ಗ್ರಾಮದಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಮಹಿಳೆಗೆ ಸರ್ಕಾರದಿಂದ ಎರಡು ಎಕರೆ ಮೂರು ಗುಂಟೆ ಜಮೀನು ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ.
ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಕ್ರೀಡಾ ಇಲಾಖೆ ಸಚಿವ ಬಿ. ನಾಗೇಂದ್ರ ಸೂಚನೆ ಮೇರೆಗೆ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ಜಮೀನು ಮಂಜೂರು ಮಾಡಲಾಗಿದೆ ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ಸಚಿವ ನಾಗೇಂದ್ರ ನಿರ್ದೇಶನದ ಅನ್ವಯ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ಭೂ ಒಡೆತನ ಯೋಜನೆಯಡಿ ಜಮೀನು ಮಂಜೂರು ಮಾಡಲಾಗಿದೆ. ನೊಂದ ಮಹಿಳೆಗೆ ಆರ್ಥಿಕ ಸ್ಥಿರತೆ ಒದಗಿಸುವ ದೃಷ್ಟಿಯಿಂದ ವಿಶೇಷ ಪ್ರಕರಣವೆಂದು ಪರಿಗಣಿಸಿ ಜಮೀನು ಮಂಜೂರು ಮಾಡಲಾಗಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.