ವಿಜಯಪುರ : ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಬಾಲಕನನ್ನು ಸುರಕ್ಷಿತವಾಗಿ ರಕ್ಷಣೆ ಮಾಡಲಾಗಿದ್ದು, ಕೋಟ್ಯಾಂತರ ಜನರ ಪ್ರಾರ್ಥನೆ ನೆರವೇರಿದೆ .ಸತತ 20 ಗಂಟೆಗಳ ಕಾಲ ನಡೆದ ಕಾರ್ಯಾಚರಣೆ ಯಶಸ್ವಿಯಾಗಿದ್ದು, ಸುರಕ್ಷಿತವಾಗಿ ಮಗುವನ್ನು ಹೊರಕ್ಕೆ ಕರೆತರಲಾಗಿದೆ. ಈ ಹಿನ್ನೆಲೆ ರಕ್ಷಣಾ ಸಿಬ್ಬಂದಿಗಳಿಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಅಭಿನಂದನೆ ಸಲ್ಲಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಟ್ವೀಟ್
ವಿಜಯಪುರ ಜಿಲ್ಲೆ ಇಂಡಿ ತಾಲ್ಲೂಕಿನ ಲಚ್ಯಾಣ ಗ್ರಾಮದಲ್ಲಿ ಆಕಸ್ಮಿಕವಾಗಿ ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಬಾಲಕ ಸಾತ್ವಿಕ್‌ನ ರಕ್ಷಣಾ ಕಾರ್ಯಾಚರಣೆ ಯಶಸ್ವಿಯಾಗಿದೆ. ಮಗುವಿನ ರಕ್ಷಣೆಗಾಗಿ ಹಗಲಿರುಳೆನ್ನದೆ ಶ್ರಮಿಸಿದ ಸಿಬ್ಬಂದಿಗಳು ಮತ್ತು ಸಾರ್ವಜನಿಕರ ಕಾರ್ಯದಕ್ಷತೆ ಪ್ರಶಂಸನೀಯ. ಮಗುವಿನ ಕುಟುಂಬದವರ, ನಾಡಿನ ಕೋಟ್ಯಂತರ ಜನರ ಹರಕೆ – ಹಾರೈಕೆಗಳು ಫಲಿಸಿದೆ, ಸಾವನ್ನೇ ಗೆದ್ದು ಬಂದ ಪುಟ್ಟ ಕಂದಮ್ಮ ಮತ್ತೆ ಪೋಷಕರ ಮಡಿಲು ಸೇರಿದ್ದು ಕಂಡು ಖುಷಿಯಾಯಿತು. ನೀರು ಬಾರದ ಅಥವಾ ಬತ್ತಿದ ಕೊಳವೆ ಬಾವಿಗಳನ್ನು ಮುಚ್ಚದಿದ್ದರೆ ಯಾರದೋ ಅಮಾಯಕ ಜೀವ ಬಲಿಯಾಗುತ್ತದೆ, ಇಂತಹ ಘಟನೆಗಳು ಕಾಲಕಾಲಕ್ಕೆ ಪುನರಾವರ್ತನೆಯಾಗುತ್ತಿದ್ದರೂ ಜನ ಜಾಗೃತರಾಗದೆ ನಿರ್ಲಕ್ಷ್ಯ ತೋರುವುದು ಬೇಸರದ ಸಂಗತಿ. ಸಮಾಜ ಈ ಬಗ್ಗೆ ಇನ್ನಾದರೂ ಎಚ್ಚೆತ್ತುಕೊಳ್ಳಬೇಕು ಎಂದು ಟ್ವೀಟ್ ಮಾಡಿದ್ದಾರೆ.
ಡಿಸಿಎಂ ಟ್ವೀಟ್
ಟ್ವೀಟ್ ಮಾಡಿ ಅಭಿನಂದನೆ ಸಲ್ಲಿಸಿದ ಡಿಸಿಎಂ ಡಿಕೆಶಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ 2 ವರ್ಷದ ಕಂದಮ್ಮ ಸಾತ್ವಿಕ್ ಜೀವಂತವಾಗಿ ಬರಲೆಂದು ಪ್ರಾರ್ಥಿಸಿದವರ ಪೈಕಿ ನಾನೂ ಒಬ್ಬ. ಬೆಳಗಿನಿಂದ ಮಾಧ್ಯಮಗಳಲ್ಲಿ ಈ ಸುದ್ದಿ ನೋಡಿ ಮನಸ್ಸಿನಲ್ಲಿ ಏನೋ ತಳಮಳವಾಗುತ್ತಿತ್ತು. ಸಾತ್ವಿಕ್ ಯಾವಾಗ ಬದುಕಿ ಬರುತ್ತಾನೋ ಎಂದು ಎದುರುನೋಡುತ್ತಿದ್ದೆ. ಯಶಸ್ವಿ ಕಾರ್ಯಾಚರಣೆ ನಡೆಸಿದ ತಂಡಕ್ಕೆ ನನ್ನ ಅನಂತ ಧನ್ಯವಾದಗಳು ಎಂದು ಟ್ವೀಟ್ ಮಾಡಿದ್ದಾರೆ.