ಬೆಂಗಳೂರು: ಪರಿಶಿಷ್ಟ ಜಾತಿ, ಪಂಗಡದ ಬಡವರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಬಾಬು ಜಗಜೀವನರಾಂ ಅವರ 115 ನೇ ಜಯಂತಿ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿ, ಪರಿಶಿಷ್ಟ ಸಮುದಾಯಕ್ಕೆ ವಸತಿ ಯೋಜನೆಯಡಿ ಮನೆ ನಿರ್ಮಿಸಲು ನೀಡುತ್ತಿದ್ದ ಸಬ್ಸಿಡಿಯನ್ನು 1.75 ಲಕ್ಷದಿಂದ 2 ಲಕ್ಷ ರೂ.ಗೆ ಹೆಚ್ಚಳ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಗ್ರಾಮೀಣ ಪ್ರದೇಶದಲ್ಲಿ ಭೂಒಡೆತನ ಹೊಂದಿದವರಿಗೆ ಸಾಮಾಜಿಕ ಗೌರವ ದೊರೆಯುತ್ತದೆ. ಸಮುದಾಯದವರಿಗೆ ಭೂಒಡೆತನಕ್ಕೆ ಸಂಬಂಧಿಸಿದಂತೆ ಭೂಸುಧಾರಣಾ ಕಾಯ್ದೆ ಜಾರಿ ಮಾಡಲಾಗಿದ್ದು, ಭೂಒಡೆತನ ಯೋಜನೆಯಡಿ ನೀಡುತ್ತಿರುವ ಸಹಾಯಧನ ಮೊತ್ತವನ್ನು 15 ರಿಂದ 20 ಲಕ್ಷ ರೂಪಾಯಿಗೆ ಹೆಚ್ಚಳ ಮಾಡಲಾಗುವುದು ಎಂದು ಹೇಳಿದ್ದಾರೆ.