ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮಂಜೂರಾಗಿರುವ ಜಮೀನಿನಲ್ಲಿ 4 ಗುಂಟೆ ವಾಸದ ಉದ್ದೇಶಕ್ಕೆ ಭೂ ಪರಿವರ್ತನೆ ಮಾಡಲು ಜಿಲ್ಲಾಧಿಕಾರಿಗೆ ಅಧಿಕಾರ ನೀಡಿ ರಾಜ್ಯ ಸರ್ಕಾರದಿಂದ ಸುತ್ತೋಲೆ ಹೊರಡಿಸಲಾಗಿದೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು 10 ಸೆಂಟ್/4 ಗುಂಟೆ ಜಮೀನಿನಲ್ಲಿ ಸ್ವಂತ ವಾಸದ ಉದ್ದೇಶಕ್ಕೆ ಭೂ ಪರಿವರ್ತನೆ ಮಾಡಲು ಕೋರಿ ವಾರಸುದಾರರು ಅರ್ಜಿ ಸಲ್ಲಿಸಿದರೆ ಅಂತಹ ಅರ್ಜಿಗಳ ಪರಿಶೀಲನೆ ನಡೆಸಿ ಜಿಲ್ಲಾಧಿಕಾರಿ ಹಂತದಲ್ಲಿಯೇ ಕ್ರಮ ಕೈಗೊಳ್ಳಬೇಕು ಎಂದು ಹೇಳಲಾಗಿದೆ.
ಸ್ವಂತ ವಾಸದ ಭೂ ಪರಿವರ್ತನೆ ಮಾಡಿದ ನಂತರ ಜಮೀನನ್ನು ಯಾವುದೇ ಕಾರಣಕ್ಕೂ ಮಾರಾಟ ಮಾಡುತಕ್ಕದ್ದಲ್ಲ. ಜಮೀನನ್ನು ಮಾರಲು ಸರ್ಕಾರದ ಪೂರ್ವಾನುಮತಿ ಕಡ್ಡಾಯವಾಗಿದೆ. ಇದರಲ್ಲಿ ಲೋಪ ಕಂಡುಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಹೇಳಲಾಗಿದೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದವರು ಭೂರಹಿತರಾಗುವುದನ್ನು ತಪ್ಪಿಸುವ ಉದ್ದೇಶದಿಂದ ಕಾನೂನು ಜಾರಿ ಮಾಡಲಾಗಿದೆ.