ಬೆಂಗಳೂರು: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮೀಸಲಾತಿ ಹೆಚ್ಚಳಕ್ಕೆ ಕ್ರಮ ಕೈಗೊಂಡಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಸಾಂವಿಧಾನಿಕ ಮಾನ್ಯತೆ ಕಲ್ಪಿಸಲು ಕಾಯ್ದೆಯನ್ನು ಸಂವಿಧಾನದ 9ನೇ ಶೆಡ್ಯೂಲ್ ಗೆ ಸೇರಿಸುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವ ಕುರಿತಾಗಿ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮುದಾಯದವರಿಗೆ ಉದ್ಯೋಗ ಹಾಗೂ ಶಿಕ್ಷಣದಲ್ಲಿ ಮೀಸಲಾತಿ ಪ್ರಮಾಣವನ್ನು ಒಟ್ಟಾರೆ ಶೇಕಡ 6 ರಷ್ಟು ಹೆಚ್ಚಳ ಮಾಡಲಾಗಿದ್ದು, ಇದಕ್ಕೆ ಸಾಂವಿಧಾನಿಕ ಮಾನ್ಯತೆ ದೊರಕಿಸಿಕೊಡಲು ಕ್ರಮ ಕೈಗೊಳ್ಳಲಾಗಿದೆ.
ಪರಿಶಿಷ್ಟ ಜಾತಿ ಮೀಸಲಾತಿ ಪ್ರಮಾಣವನ್ನು ಶೇಕಡ 15 ರಿಂದ 17ಕ್ಕೆ, ಪರಿಶಿಷ್ಟ ಪಂಗಡದ ಮೀಸಲಾತಿ ಪ್ರಮಾಣವನ್ನು ಶೇ. 3 ರಿಂದ ಶೇ. 7 ಕ್ಕೆ ಹೆಚ್ಚಳ ಮಾಡುವ ಬಗ್ಗೆ ಸರ್ಕಾರ ನಿರ್ಧಾರ ಕೈಗೊಂಡಿದೆ.
ಜನವರಿ 10 ರ ನಂತರ ನಡೆದ ಎಲ್ಲಾ ನೇಮಕಾತಿ, ಬಡ್ತಿಯನ್ನು ಹೊಸ ಮೀಸಲಾತಿ ಅನ್ವಯ ನೀಡುವಂತೆ ಆದೇಶಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಕಾಯ್ದೆಯನ್ನು 9ನೇ ಶೆಡ್ಯೂಲ್ ಗೆ ಸೇರಿಸಲು ಕೇಂದ್ರಕ್ಕೆ ಸಂಪುಟ ಸಭೆ ಶಿಫಾರಸು ಮಾಡಿದ್ದು, ಮೀಸಲಾತಿ ಹೆಚ್ಚಳಕ್ಕೆ ಸಾಂವಿಧಾನಿಕ ಭದ್ರತೆ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ.