ಕೊಪ್ಪಳ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಎಸ್ಸಿ ಮತ್ತು ಎಸ್ಟಿ ವಿದ್ಯಾರ್ಥಿಗಳಿಗೆ ಈಗಾಗಲೇ ಪ್ರೋತ್ಸಾಹಧನ ಮಂಜೂರಾಗಿದೆ. ಪ್ರೋತ್ಸಾಹಧನ ಜಮೆಯಾಗದ ವಿದ್ಯಾರ್ಥಿಗಳು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಮಾಡಿ, ಇಲಾಖೆಗೆ ಮಾಹಿತಿ ಸಲ್ಲಿಸುವಂತೆ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.
2021-22ನೇ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಶೇ. 60 ರಿಂದ 74.99 ರಷ್ಟು ಅಂಕ ಪಡೆದ ವಿದ್ಯಾರ್ಥಿಗಳಿಗೆ 7000 ರೂ. ಮತ್ತು ಶೇ. 75 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ 15,000 ರೂ. ಪ್ರೋತ್ಸಾಹಧನವನ್ನು ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ನೀಡಲಾಗುವುದು.
ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆಯಾಗದ ಕಾರಣ ಕೆಲ ವಿದ್ಯಾರ್ಥಿಗಳಿಗೆ ಈ ಪ್ರೋತ್ಸಾಹಧನ ಮಂಜೂರಾಗಿರುವುದಿಲ್ಲ. ಆದ್ದರಿಂದ ಪ್ರೋತ್ಸಾಹಧನ ಮಂಜೂರಾಗದ ವಿದ್ಯಾರ್ಥಿಗಳು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡಿಸಿ, ತಮ್ಮ ಎಸ್.ಎಸ್.ಎಲ್.ಸಿ ಅಂಕಪಟ್ಟಿ ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯನ್ನು ಉಪನಿರ್ದೇಶಕರ ಕಛೇರಿ ಸಮಾಜ ಕಲ್ಯಾಣ ಇಲಾಖೆ, ಕೊಪ್ಪಳ ಇಲ್ಲಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಕೊಪ್ಪಳ ಮತ್ತು ತಾಲ್ಲೂಕಿನ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಇವರನ್ನು ಸಂಪರ್ಕಿಸಬಹುದು ಎಂದು ಹೇಳಲಾಗಿದೆ.