
ರಾಯಚೂರು: ಸಮಾಜ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ, ಹಿಂದುಳಿದ ವರ್ಗಗಳ ಇಲಾಖೆಗಳ ವತಿಯಿಂದ 2022-23ನೇ ಸಾಲಿಗೆ ಜಿಲ್ಲೆಯಲ್ಲಿ ನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಡಾ.ಬಿ.ಆರ್.ಅಂಬೇಡ್ಕರ್, ಶ್ರೀಮತಿ ಇಂದಿರಾಗಾಂಧಿ, ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿ ಖಾಲಿ ಇರುವ ವಿವಿಧ ತರಗತಿಗಳ ಸ್ಥಾನಗಳ ಭರ್ತಿ ಮಾಡಲು ಅರ್ಜಿಗಳನ್ನು ಅಹ್ವಾನಿಸಲಾಗಿದೆ.
7 ರಿಂದ 9ನೇ ತರಗತಿಗಳ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, 10ನೇ ತರಗತಿಯವರೆಗೆ ಆಂಗ್ಲ ಮಾಧ್ಯಮದಲ್ಲಿ ವ್ಯಾಸಂಗ ಮಾಡಲು ಪ್ರತಿಭಾವಂತ ಗ್ರಾಮೀಣ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದ್ದು, ವಿದ್ಯಾರ್ಥಿಗಳಿಗೆ ಉಚಿತವಾಗಿ ಊಟ, ವಸತಿ, ಸಮವಸ್ತ್ರ, ಪಠ್ಯಪುಸ್ತಕ ಹಾಗೂ ಇನ್ನಿತರೆ ಸಾಮಗ್ರಿಗಳನ್ನು ನೀಡುವುದರ ಜೊತೆಗೆ ಉತ್ತಮವಾದ ಉಚಿತ ವಿದ್ಯಾಭ್ಯಾಸ ನೀಡಲಾಗುತ್ತದೆ.
ಪ.ಜಾತಿ, ಪ.ವರ್ಗ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಪ್ರವೇಶ ಲಭ್ಯವಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಮತ್ತು ಪ್ರವರ್ಗ-1ರ ವಿದ್ಯಾರ್ಥಿಗಳ ಪೋಷಕರ ಆದಾಯ ಮಿತಿ 2.50 ಲಕ್ಷ ರೂ. ಮೀರಿರಬಾರದು ಮತ್ತು ಹಿಂದುಳಿದ ವರ್ಗದ ಪ್ರವರ್ಗ 2ಎ, 2ಬಿ, 3ಎ, 3ಬಿ ರವರಿಗೆ 1 ಲಕ್ಷ ರೂ. ಆದಾಯ ಮಿತಿ ಇರುತ್ತದೆ.
ವಿದ್ಯಾರ್ಥಿಗಳು ತಮ್ಮ ಹಿಂದಿನ ವರ್ಷದಲ್ಲಿ ಪಡೆದ ಅಂಕಗಳ ಮೆರಿಟ್ ಆಧಾರದ ಮೇಲೆ ಮೀಸಲಾತಿ ಅನ್ವಯ ಆಯ್ಕೆ ಪ್ರಕ್ರಿಯೆಯನ್ನು ಕೈಗೊಳ್ಳಲಾಗುವುದು. ಜಿಲ್ಲೆಯ ವಿದ್ಯಾರ್ಥಿಗಳಿಗೆ ಪ್ರಥಮ ಆಧ್ಯತೆಯನ್ನು ನೀಡಲಾಗುವುದು. ಸದರಿ ವಸತಿ ಶಾಲೆಗಳಿಗೆ ಪ್ರವೇಶ ಪಡೆಯಲು ಜಿಲ್ಲೆಯ ಆಯಾ ತಾಲೂಕಿನ ಎಲ್ಲಾ ವಸತಿ ಶಾಲೆಗಳಲ್ಲಿ ಅರ್ಜಿಗಳನ್ನು ಪಡೆದು ಭರ್ತಿ ಮಾಡಿ ಮೇ.10ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಆಯ್ಕೆ ಪಟ್ಟಿಯನ್ನು ಮೇ.15 ಹಾಗೂ ದಾಖಲಾತಿಯನ್ನು ಹೊಂದಲು ಮೇ.20 ಕೊನೆಯ ದಿನವಾಗಿದೆ ಎಂದು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.