ಬೆಂಗಳೂರು: ಅನುದಾನಿತ ಶಾಲಾ, ಕಾಲೇಜುಗಳ ನೌಕರರ ಪಿಂಚಣಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆ ಒತ್ತಾಯಿಸಿ ಮಾರ್ಚ್ 4 ರಂದು ಶಾಲಾ, ಕಾಲೇಜುಗಳನ್ನು ಬಂದ್ ಮಾಡಲಾಗುವುದು.
ರಾಜ್ಯ ಅನುದಾನಿತ ಶಾಲಾ, ನೌಕರರ ಸಂಘದ ಅಧ್ಯಕ್ಷ ಡಿ.ಸಿ. ಗೋಪಿನಾಥ್ ಈ ಬಗ್ಗೆ ಮಾಹಿತಿ ನೀಡಿದ್ದು, ಮಾರ್ಚ್ 4 ರಂದು ರಾಜ್ಯಾದ್ಯಂತ ಶಾಲಾ, ಕಾಲೇಜುಗಳನ್ನು ಬಂದ್ ಮಾಡಲಾಗುವುದು. ಬೆಂಗಳೂರಿನ ಫ್ರೀಡಂ ಪಾರ್ಕ್ ನಿಂದ ವಿಧಾನಸೌಧ ಚಲೋ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
2006 ಕ್ಕೆ ಮೊದಲು ನೇಮಕವಾಗಿ ನಂತರದಲ್ಲಿ ಅನುದಾನಕ್ಕೆ ಒಳಪಟ್ಟ ಶಾಲಾ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರು ಮತ್ತು ನಿವೃತ್ತ ನೌಕರರ ಸೇವಾವಧಿ ಪರಿಗಣಿಸಿ ಹಳೆಯ ನಿಶ್ಚಿತ ಪಿಂಚಣಿ ಸೌಲಭ್ಯ ನೀಡಬೇಕು. ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು. ಮಾನ್ಯತೆ ನವೀಕರಣ ಪ್ರಕ್ರಿಯೆ ಸರಳಗೊಳಿಸಬೇಕೆಂದು ಆಗ್ರಹಿಸಿದ್ದಾರೆ.