ತುಮಕೂರು: ರಾಜ್ಯದಲ್ಲಿ ಒಮಿಕ್ರೋನ್ ಹರಡದಂತೆ ನಿಯಂತ್ರಿಸಲು ಸರ್ಕಾರದಿಂದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುತ್ತಿದೆ. ಶಾಲೆ, ಕಾಲೇಜುಗಳನ್ನು ಮುಚ್ಚುವ ಚಿಂತನೆ ಇಲ್ಲ. ಸೋಂಕು ತೀವ್ರಗೊಂಡಲ್ಲಿ ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ಸಲಹೆ ಪಡೆದು ಮುಖ್ಯಮಂತ್ರಿ ನೇತೃತ್ವದಲ್ಲಿ ಶಾಲೆ-ಕಾಲೇಜುಗಳನ್ನು ಬಂದ್ ಮಾಡುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಈ ಬಗ್ಗೆ ಮಾಹಿತಿ ನೀಡಿ, ಸದ್ಯಕ್ಕೆ ಶಾಲೆ, ಕಾಲೇಜುಗಳನ್ನು ಬಂದ್ ಮಾಡುವುದಿಲ್ಲ. ರಾಜ್ಯದಲ್ಲಿ ಯಾವ ಪ್ರಾಥಮಿಕ ಮತ್ತು ಪ್ರೌಢಶಾಲೆ ವಿದ್ಯಾರ್ಥಿಗಳಲ್ಲಿಯು ಕೊರೋನಾ ಸೋಂಕು ಪತ್ತೆಯಾಗಿಲ್ಲ. ರೋಗ ಲಕ್ಷಣಗಳು ಕೂಡ ಕಂಡುಬಂದಿಲ್ಲ ಎಂದು ಅವರು ಹೇಳಿದ್ದಾರೆ.
ಕೆಲವು ಕಡೆ ಕಾಲೇಜುಗಳ ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿರುವುದರಿಂದ ಆತಂಕ ಬೇಡ. ಮಕ್ಕಳ ಆರೋಗ್ಯದ ಬಗ್ಗೆ ನಮಗೂ ಕಾಳಜಿ ಇದೆ. ಶಿಕ್ಷಣ ಇಲಾಖೆ ಎಲ್ಲಾ ಡಿಡಿಪಿಐಗಳಿಂದ ಪ್ರತಿ ಗಂಟೆಗೊಮ್ಮೆ ಮಾಹಿತಿ ಪಡೆದುಕೊಳ್ಳುತ್ತಿದೆ. ಶಾಲೆ-ಕಾಲೇಜುಗಳಲ್ಲಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ತಿಳಿಸಲಾಗಿದೆ ಎಂದರು.