ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲಾ ಮಕ್ಕಳಿಗೆ ಇಂದಿನಿಂದ ವಾರದಲ್ಲಿ ಆರು ದಿನ ಮೊಟ್ಟೆ ನೀಡಲಾಗುವುದು. ಯಾದಗಿರಿಯಲ್ಲಿ ಇಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಚಾಲನೆ ನೀಡಲಿದ್ದಾರೆ.
ಸರ್ಕಾರದಿಂದ ಎರಡು ದಿನ, ಅಜೀಂ ಪ್ರೇಮ್ ಜಿ ಫೌಂಡೇಶನ್ ನೆರವಿನಿಂದ ನಾಲ್ಕು ದಿನ ಮೊಟ್ಟೆ ನೀಡಲಾಗುತ್ತದೆ. ಕಳೆದ ಜುಲೈನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಂಕೇತಿಕವಾಗಿ ಆರು ದಿನಗಳ ಮೊಟ್ಟೆ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದರು. ಇದೀಗ ರಾಜ್ಯದಾದ್ಯಂತ ಎಲ್ಲಾ ಶಾಲೆಗಳಲ್ಲಿಯೂ ಅಧಿಕೃತವಾಗಿ ಮೊಟ್ಟೆ ವಿತರಣೆ ಆರಂಭಿಸಲಾಗುವುದು.
ಯಾದಗಿರಿ ಜಿಲ್ಲೆಯ ಅರಕೇರಾ ಕೆ. ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಇಂದು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಈಗಾಗಲೇ ವಾರದಲ್ಲಿ ಎರಡು ದಿನ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಬೇಯಿಸಿದ ಕೋಳಿ ಮೊಟ್ಟೆಯನ್ನು ನೀಡಲಾಗುತ್ತಿದೆ. ಇದರೊಂದಿಗೆ ಅಜೀಂ ಪ್ರೇಮ್ ಜಿ ಫೌಂಡೇಶನ್ ನೆರವಿನಿಂದ ನಾಲ್ಕು ದಿನ ಮೊಟ್ಟೆ ನೀಡಲಿದ್ದು, ಅವರದ ಆರು ದಿನವೂ ಮಕ್ಕಳಿಗೆ ಮೊಟ್ಟೆ ಸಿಗಲಿದೆ.
ಮುಂದಿನ ಮೂರು ವರ್ಷಗಳ ಕಾಲ ಸರ್ಕಾರಿ, ಅನುದಾನಿತ ಶಾಲಾ ಮಕ್ಕಳಿಗೆ ಮೊಟ್ಟೆ ನೀಡಲು ಅಜೀಂ ಪ್ರೇಮ್ ಜಿ ಫೌಂಡೇಷನ್ 1,500 ಕೋಟಿ ರೂಪಾಯಿ ನೆರವು ನೀಡಿದೆ. ಮೊಟ್ಟೆ ಸೇವಿಸದ ಮಕ್ಕಳಿಗೆ ಶೇಂಗಾ ಚಿಕ್ಕಿ, ಬಾಳೆಹಣ್ಣು ನೀಡಲಾಗುವುದು.