ಬಳ್ಳಾರಿ: ಕಲ್ಯಾಣ ಕರ್ನಾಟಕ ಭಾಗದ ಏಳು ಜಿಲ್ಲೆಗಳ ಶೈಕ್ಷಣಿಕ ಅಭಿವೃದ್ಧಿಗೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ವತಿಯಿಂದ ಶೇ.25 ರಷ್ಟು ಅನುದಾನ ಮೀಸಲಿರಿಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಶಾಲಾ ಶಿಕ್ಷಣ ಇಲಾಖೆ ಕಲಬುರಗಿ ವಿಭಾಗ, ಜೆಎಸ್‌ಡಬ್ಲ್ಯೂ ಫೌಂಡೇಶನ್ ತೋರಣಗಲ್ಲು ಇವರ ಸಂಯುಕ್ತಾಶ್ರಯದಲ್ಲಿ ತೋರಣಗಲ್ಲಿನ ವಿದ್ಯಾನಗರದ ಜೆ-ಮ್ಯಾಕ್ಸ್ ಸಭಾಂಗಣದಲ್ಲಿ ಆಯೋಜಿಸಿದ್ದ ‘ಎಜುಕಾನ್-2024’ ಎರಡು ದಿನಗಳ ಶೈಕ್ಷಣಿಕ ಸಮಾವೇಶದ ಎರಡನೇ ದಿನದ ಕಾರ್ಯಕ್ರಮ ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.
ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಒಂದು ಸಾವಿರಕ್ಕೂ ಹೆಚ್ಚು ಪೂರ್ವ ಪ್ರಾಥಮಿಕ ಶಾಲೆಗಳನ್ನು ಆರಂಭಿಸಲಾಗಿದೆ. ಇದರಿಂದ ಸರ್ಕಾರಿ ಶಾಲೆಗೆ ಬರುವ ಮಕ್ಕಳ ಸಂಖ್ಯೆಯಲ್ಲಿ ಹೆಚ್ಚಳವಾಗಲಿದೆ. ಈಗಾಗಲೇ 42,500 ಅತಿಥಿ ಶಿಕ್ಷಕರನ್ನು ನೇಮಿಸಲಾಗಿದೆ. ಕಕ ವ್ಯಾಪ್ತಿಯಲ್ಲಿ 11,600 ಶಿಕ್ಷಕರನ್ನು ನೇಮಕ ಮಾಡಲಾಗಿದೆ ಎಂದು ಹೇಳಿದರು.
ಕಕ ಭಾಗದಲ್ಲಿ ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂದೇಟು ಹಾಕುತ್ತಿದ್ದು, ವಿಷಾದನೀಯ ಸಂಗತಿಯಾಗಿದೆ. ಶಿಕ್ಷಕರು ವಿದ್ಯಾರ್ಥಿಗಳ ಬರುವಿಕೆಗಾಗಿ ಕಾಯುತ್ತಿದ್ದಾರೆ. ಮಕ್ಕಳನ್ನು ದೇಶದ ಆಸ್ತಿಯನ್ನಾಗಿ ಮಾಡಲು ಪೋಷಕರು ತಪ್ಪದೇ ಶಾಲೆಗಳಿಗೆ ಕಳುಹಿಸಬೇಕು ಎಂದು ಕರೆ ನೀಡಿದ ಅವರು, ಇದರ ಜವಾಬ್ದಾರಿಯನ್ನು ಎಸ್‌ಡಿಎಂಸಿಯವರು ವಹಿಸಬೇಕು ಎಂದು ಹೇಳಿದರು.
ಸರ್ಕಾರಿ ಕಾಲೇಜಿನಲ್ಲೂ ನೀಟ್, ಸಿಇಟಿ ತರಬೇತಿ:
ಖಾಸಗಿ ಶಾಲೆಗಳ ವಿದ್ಯಾರ್ಥಿಗಳು ನೀಟ್, ಜೆಇಇ ಮತ್ತಿತರ ಪ್ರವೇಶ ಪರೀಕ್ಷೆಗಳಿಗೆ ಪ್ರತ್ಯೇಕ ಶುಲ್ಕ ಪಾವತಿಸಿ ಕಾಲೇಜು ಹಂತದಲ್ಲೇ ತರಬೇತಿ ಪಡೆಯುತ್ತಾರೆ. ದ್ವಿತೀಯ ಪಿಯು ಉತ್ತೀರ್ಣರಾದ ಸರ್ಕಾರಿ ಕಾಲೇಜು ವಿದ್ಯಾರ್ಥಿಗಳಿಗೂ ಕೂಡ ಸಿಇಟಿ, ನೀಟ್ ಸೇರಿದಂತೆ ವಿವಿಧ ಕೋರ್ಸ್ಗಳ ಪ್ರವೇಶಕ್ಕೆ ಅಗತ್ಯವಾದ ತರಬೇತಿ ನೀಡಲು 25 ಸಾವಿರ ಮಕ್ಕಳಿಗೆ ರಾಜ್ಯ ಸರ್ಕಾರವು 12 ಕೋಟಿ ರೂ. ನೀಡಲಾಗಿದೆ ಎಂದು ಹೇಳಿದರು.
ಶಿಕ್ಷಣದ ಪಾವಿತ್ರ್ಯತೆ ಕಾಪಾಡಲು ಮತ್ತು ವಿದ್ಯಾರ್ಥಿಗಳಿಗೆ ಮುಂದಿನ ಉನ್ನತ ಶಿಕ್ಷಣದಲ್ಲಿ ಯಾವುದೇ ರೀತಿಯ ತಪ್ಪು ಮಾರ್ಗ ಅನುಸರಿಸದಂತೆ, ರಾಜ್ಯದ ಎಲ್ಲಾ ಶಾಲೆಗಳಲ್ಲಿ ಎಸ್‌ಎಸ್‌ಎಲ್ ಪರೀಕ್ಷಾ ಸಮಯದಲ್ಲಿ ವೆಬ್ ಕಾಸ್ಟಿಂಗ್ ಮಾಡಲಾಗಿದ್ದು, ಈ ಕಾರ್ಯಕ್ಕೆ ಪ್ರಶಂಸನೆ ದೊರಕಿದೆ ಎಂದರು.
ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮರು ಪ್ರವೇಶ
ಮೂರು ಪರೀಕ್ಷೆಗಳನ್ನು ಪರಿಚಯಿಸಿದ ಪರಿಣಾಮ ಅನುತ್ತೀರ್ಣತೆಯ ಪ್ರಮಾಣದಲ್ಲಿ ಇಳಿಕೆಯಾಗಿದೆ. ಮೂರೂ ಪರೀಕ್ಷೆಗಳಲ್ಲೂ ತೇರ್ಗಡೆಯಾಗದೆ ಒಂದು ವರ್ಷ ಮನೆಯಲ್ಲೇ ಉಳಿಯುವ ವಿದ್ಯಾರ್ಥಿಗಳಿಗೆ ಮರು ದಾಖಲು ಮಾಡಿಕೊಳ್ಳಲಾಗುತ್ತಿದೆ. ಎಸ್‌ಎಸ್‌ಎಲ್‌ಸಿಗೆ ಮರು ದಾಖಲಾಗುವ ಮಕ್ಕಳಿಗೆ ಇತರೆ ಮಕ್ಕಳಂತೆ ಸಮವಸ್ತ್ರ ಪಠ್ಯಪುಸ್ತಕ ಶೂ, ಸಾಕ್ಸ್ ಮಧ್ಯಾಹ್ನದ ಬಿಸಿಯೂಟ ಸೇರಿ ಎಲ್ಲಾ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದರು.
ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅನುಮತಿ ನೀಡಲಾಗಿದೆ. ಬೋಧಕ ಹಾಗೂ ಬೋಧಕೇತರ ಹುದ್ದೆಗಳ ಭರ್ತಿಗೆ ಅಗತ್ಯವಾದ ಅನುದಾನ ನೀಡಲಾಗುತ್ತಿದೆ. ಬಹುತೇಕ ಶಾಲೆಗಳು ಕನ್ನಡ ಮಾಧ್ಯಮದ ಶಾಲೆಗಳಾಗಿದ್ದು, ಸರ್ಕಾರದ ನಿರ್ಧಾರದಿಂದ ಅವುಗಳ ಬಲವರ್ಧನೆಗೆ ಸಹಕಾರಿಯಾಗಲಿದೆ ಎಂದು ಮಧು ಬಂಗಾರಪ್ಪ ಹೇಳಿದರು.
ವಾರದ 6 ದಿನವೂ ಮೊಟ್ಟೆ ವಿತರಣೆ:
ಮಕ್ಕಳಿಗೆ ಮಧ್ಯಾಹ್ನದ ಊಟದ ಜೊತೆಗೆ ವಾರಕ್ಕೆ 2 ದಿನ ಮೊಟ್ಟೆ, ಚಿಕ್ಕಿ ಬಾಳೆಹಣ್ಣು ನೀಡಲಾಗುತ್ತಿತ್ತು. ರಾಜ್ಯದಲ್ಲಿನ ಸರ್ಕಾರಿ ಹಾಗೂ ಅನುದಾನಿತ ಶಾಲಾ ಮಕ್ಕಳಿಗೆ ಇನ್ನು ಮುಂದೆ ವಾರದ 6 ದಿನವೂ ಮೊಟ್ಟೆ ನೀಡಲಾಗುತ್ತದೆ. ಸರ್ಕಾರ ಈಗಾಗಲೇ ವಾರದಲ್ಲಿ 2 ದಿನ ಮೊಟ್ಟೆ ನೀಡುತ್ತಿತ್ತು. ಇದರ ಜತೆಗೆ ಉಳಿದ 4 ದಿನ ಮೊಟ್ಟೆ ನೀಡಲು ಅಜೀಂ ಪ್ರೇಮ್‌ಜೀ ಫೌಂಡೇಷನ್ ಮುಂದೆ ಬಂದಿದ್ದು, ವಾರದ ಎಲ್ಲಾ ದಿನವೂ ಪೂರಕ ಪೌಷ್ಟಿಕ ಆಹಾರ ಲಭಿಸಲಿದೆ. ಎಲ್ಲಾ ಮಕ್ಕಳಿಗೆ ಒಳ್ಳೆಯ ಆಹಾರ ಸಿಗಬೇಕು ಎಂಬುದು ನಮ್ಮ ಸರ್ಕಾರದ ಆಶಯವಾಗಿದೆ ಎಂದು ಅವರು ತಿಳಿಸಿದರು.
‘ನನ್ನ ಶಾಲೆ-ನನ್ನ ಜವಾಬ್ದಾರಿ’:
ಸರ್ಕಾರಿ ಶಾಲೆಯಲ್ಲಿ ಉಚಿತವಾಗಿ ಓದಿದವರು ಆ ಶಾಲೆಗಳನ್ನು ಮರೆಯದೆ ತಮ್ಮ ಕೈಯಲ್ಲಾದ ಸಹಕಾರ ನೀಡಬೇಕು ಎಂಬ ಉದ್ದೇಶದಿಂದ ‘ನನ್ನ ಶಾಲೆ-ನನ್ನ ಜವಾಬ್ದಾರಿ’ ಎಂಬ ಯೋಜನೆಯನ್ನು ಆರಂಭಿಸಲಾಗಿದ್ದು, ಹಳೆ ವಿದ್ಯಾರ್ಥಿಗಳನ್ನು ಒಂದುಗೂಡಿಸಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಈ ಕಾರ್ಯಕ್ರಮ ಪೂರಕವಾಗಿದೆ.
ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯಬೇಕು. ವೈಚಾರಿಕತೆ, ವೈಜ್ಞಾನಿಕತೆ ಬೆಳೆಸಿಕೊಳ್ಳಬೇಕು. ಜ್ಞಾನದ ವಿಕಾಸವಾಗಬೇಕು ಎನ್ನುವ ವಿನೂತನ ಚಿಂತನೆಯಿಂದ ‘ನನ್ನ ಶಾಲೆ ನನ್ನ ಜವಾಬ್ದಾರಿ’ ಹೆಸರಿನ ವಿದ್ಯಾರ್ಥಿಗಳ ಸಂಘ ರಚನೆ ಮಾಡಿ, ವಾಟ್ಸಾಪ್ ಗ್ರೂಪ್‌ಗಳ ಮೂಲಕ ಒಗ್ಗೂಡಿಸಲು ಸಲಹೆ ನೀಡಲಾಗುತ್ತಿದೆ ಎಂದು ಅವರು ತಿಳಿಸಿದರು.
ರಾಜ್ಯದಲ್ಲಿ ಸುಮಾರು 6 ಸಾವಿರ ಗ್ರಾಮ ಪಂಚಾಯಿತಿಗಳಿದ್ದು, ಎರಡು ಗ್ರಾಮ ಪಂಚಾಯಿತಿಗೊಂದರಂತೆ 3 ಸಾವಿರ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಸ್ಥಾಪಿಸಲಾಗುವುದು. ಈ ಬಾರಿ 600 ಶಾಲೆಗಳನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ. ಶಿಕ್ಷಕರ ನೇಮಕಾತಿಗೂ ಕ್ರಮವಹಿಸಲಾಗಿದೆ’ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕಲಬುರಗಿ ವಿಭಾಗದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಪರ ಆಯುಕ್ತ ಡಾ.ಆಕಾಶ್ ಶಂಕರ್, ಜೆಎಸ್‌ಬ್ಲ್ಯೂ ಸಂಸ್ಥೆಯ ಅಧ್ಯಕ್ಷ ಪಿ.ಕೆ.ಮುರುಗನ್, ಜೆಎಸ್‌ಬ್ಲ್ಯೂನ ಸಿಇಒ ಹರ್ಷವರ್ಧನ ನವತೆ, ವಡ್ಡು ಗ್ರಾಪಂ ಅಧ್ಯಕ್ಷೆ ಕೆ.ಎಂ.ನಿಂಗಮ್ಮ ನಾಗರಾಜ ಸೇರಿದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿಧಿಗಳು, ಶಿಕ್ಷಕರು ಉಪಸ್ಥಿತರಿದ್ದರು.