ಬೆಂಗಳೂರು: ರಾಜ್ಯದಲ್ಲಿ ಶಾಲೆಗಳನ್ನು ಪ್ರಾರಂಭಿಸಲು ಸರ್ಕಾರ ಸಿದ್ಧತೆ ಕೈಗೊಂಡಿದೆ ಎಂದು ಹೇಳಲಾಗಿದೆ. ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಮೂಲ ಸೌಕರ್ಯ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಲು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ನೀರು, ಕೊಠಡಿ ದುರಸ್ತಿ, ಶೌಚಾಲಯ ವ್ಯವಸ್ಥೆ ಮಾಡಿಕೊಳ್ಳಲು ತಿಳಿಸಲಾಗಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಎಲ್ಲಾ ಡಿಡಿಪಿಐ ಮತ್ತು ಬಿಇಒಗಳಿಗೆ ಈ ಕುರಿತು ಸೂಚನೆ ನೀಡಿದ್ದಾರೆ ಎಂದು ಹೇಳಲಾಗಿದೆ.
ಇನ್ನು ಶಾಲೆಗಳನ್ನು ಆರಂಭಿಸುವ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ಎಸ್. ಸುರೇಶ್ ಕುಮಾರ್ ನೇತೃತ್ವದಲ್ಲಿ ನವೆಂಬರ್ 4, 5 ರಂದು ಮಹತ್ವದ ಸಭೆ ನಡೆಯಲಿದೆ. ಸಭೆಯಲ್ಲಿ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು, ಶಿಕ್ಷಣ ತಜ್ಞರು, ಶಿಕ್ಷಕರ ಸಂಘದ ಪದಾಧಿಕಾರಿಗಳು ಮೊದಲಾದವರೊಂದಿಗೆ ಚರ್ಚಿಸಿ ಶಾಲೆಗಳ ಆರಂಭಕ್ಕೆ ದಿನಾಂಕ ನಿಗದಿ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಸಭೆಯಲ್ಲಿ ಶಾಲೆಗಳ ಆರಂಭದ ಸಾಧಕ-ಬಾಧಕಗಳ ಬಗ್ಗೆ ಚರ್ಚೆ ನಡೆಸಲಾಗುತ್ತದೆ. ಅಭಿಪ್ರಾಯ ಸಂಗ್ರಹದ ನಂತರ ಶಾಲೆ ಆರಂಭಿಸುವ ಕುರಿತು ಚಿಂತನೆ ನಡೆಸಲಾಗುವುದು ಎನ್ನಲಾಗಿದೆ.