ಬೆಂಗಳೂರು: ಸಂಚಾರ ದಟ್ಟಣೆ ಸಮಸ್ಯೆ ಹಿನ್ನೆಲೆಯಲ್ಲಿ ಮಕ್ಕಳ ಹಿತದೃಷ್ಟಿಯಿಂದ ಬೆಂಗಳೂರಿನಲ್ಲಿ ಶಾಲೆಗಳ ಸಮಯ ಬದಲಾವಣೆಗೆ ಹೈಕೋರ್ಟ್ ನಿರ್ದೇಶನ ನೀಡಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಅ. 5ರಂದು ಎಲ್ಲಾ ಭಾಗಿದಾರರ ಸಮಾಲೋಚನಾ ಸಭೆ ಆಯೋಜಿಸಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಅಧ್ಯಕ್ಷತೆಯಲ್ಲಿ ಕೆ.ಆರ್. ವೃತ್ತದಲ್ಲಿರುವ ಸಮಗ್ರ ಶಿಕ್ಷಣ ಕಚೇರಿ ಸಭಾಂಗಣದಲ್ಲಿ ಬೆಳಿಗ್ಗೆ 11 ಗಂಟೆಗೆ ಸಭೆ ಕರೆಯಲಾಗಿದೆ. ಪೊಲೀಸ್ ಇಲಾಖೆ, ಸಾರಿಗೆ ಇಲಾಖೆ, ಶಿಕ್ಷಣ ಇಲಾಖೆಯ ವಿವಿಧ ಅಧಿಕಾರಿಗಳು, ರಾಜ್ಯ ಸರ್ಕಾರಿ, ಖಾಸಗಿ, ಅನುದಾನಿತ ಶಾಲಾ ಶಿಕ್ಷಕರ ಸಂಘಗಳು, ವಿವಿಧ ಖಾಸಗಿ ಶಾಲಾ ಸಂಘಟನೆಗಳು, ಶಾಲಾ ವಾಹನ ಚಾಲಕರ ಸಂಘ, ಪೋಷಕರ ಸಂಘಟನೆಗಳಿಂದ ತಲಾ ಇಬ್ಬರು ಪ್ರತಿನಿಧಿಗಳನ್ನು ಸಭೆಗೆ ಆಹ್ವಾನಿಸಲಾಗಿದೆ.
ಪ್ರಸ್ತುತ ಶಾಲೆಗಳು ಬೆಳಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ನಡೆಯುತ್ತಿದೆ. ಸಂಚಾರ ದಟ್ಟಣೆ ಸಮಸ್ಯೆ ಹಿನ್ನೆಲೆಯಲ್ಲಿ ಬೆಳಗ್ಗೆ 8 ಗಂಟೆಗೆ ಶಾಲೆ ಆರಂಭಿಸಿ ಮಧ್ಯಾಹ್ನ 3 ಗಂಟೆಗೆ ಬಿಡುವ ಬಗ್ಗೆ ಚರ್ಚೆ ಚಿಂತನೆ ಇದೆ. ಬೇಗನೆ ಶಾಲೆಗಳನ್ನು ಆರಂಭಿಸುವುದರಿಂದ ಮಕ್ಕಳ ಮೇಲೆ ಒತ್ತಡ ಹೆಚ್ಚಾಗುತ್ತದೆ ಮತ್ತು ಪೋಷಕರಿಗೆ ಮಧ್ಯಾಹ್ನ 3 ಗಂಟೆಗೆ ಮಕ್ಕಳನ್ನು ಕರೆತರಲು ಸಮಸ್ಯೆಯಾಗುತ್ತದೆ ಎಂದು ಹೇಳಲಾಗಿದ್ದು, ನಾಳೆ ನಡೆಯಲಿರುವ ಸಭೆಯಲ್ಲಿ ಯಾವ ನಿರ್ಧಾರ ಕೈಗೊಳ್ಳಲಾಗುವುದು ಎಂಬುದನ್ನು ಕಾದು ನೋಡಬೇಕಿದೆ.