ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆ ಮಕ್ಕಳಿಗೆ ಕೇವಲ ಒಂದು ಜೊತೆ ಸಮವಸ್ತ್ರ ನೀಡಲಾಗಿದ್ದು, ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ವಿಭಾಗಿಯ ಪೀಠ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
ಉತ್ಸವ ನಡೆಸಲು ಕೋಟ್ಯಂತರ ರೂಪಾಯಿ ಹಣ ಖರ್ಚು ಮಾಡಲಾಗುತ್ತದೆ. ಆದರೆ, ಸರ್ಕಾರಿ ಶಾಲೆಗಳ ಮಕ್ಕಳಿಗೆ ಸಮವಸ್ತ್ರ ನೀಡುತ್ತಿಲ್ಲ. ರಾಜ್ಯ ಸರ್ಕಾರ, ಅಧಿಕಾರಿಗಳಿಗೆ ನಿಜಕ್ಕೂ ನಾಚಿಕೆಯಾಗಬೇಕು. ಅಧಿಕಾರಿಗಳಿಗೆ ಮರ್ಯಾದೆ, ಆತ್ಮಸಾಕ್ಷಿ ಇಲ್ಲ. ಅವರು ಸರ್ಕಾರಿ ಶಾಲೆ ಮಕ್ಕಳಿಗೆ ಮಾನವೀಯತೆ ತೋರುತ್ತಿಲ್ಲ. ಅಧಿಕಾರಿಗಳ ಮಕ್ಕಳು ಸರ್ಕಾರಿ ಶಾಲೆಗೆ ಹೋಗುವುದಿಲ್ಲ. ಖಾಸಗಿ ಶಾಲೆಗಳಿಗೆ ಕಾರಿನಲ್ಲಿ ಹೋಗಿ ಬರುತ್ತಾರೆ ಎಂದು ಹೈಕೋರ್ಟ್ ಚಾಟಿ ಬೀಸಿದೆ.
ಮಕ್ಕಳ ವಿಚಾರದಲ್ಲಿ ಮಲತಾಯಿ ಧೋರಣೆ ಸಹಿಸುವುದಿಲ್ಲ. ಸರ್ಕಾರ ಈಗಲಾದರೂ ಕಣ್ಣು ತೆರೆದು ಸಮವಸ್ತ್ರ ಒದಗಿಸಬೇಕು ಎಂದು ನ್ಯಾಯಮೂರ್ತಿಗಳಾದ ಬಿ. ವೀರಪ್ಪ ಮತ್ತು ಕೆ.ಎಸ್ ಹೇಮಲೇಖಾ ಅವರಿದ್ದ ಪೀಠ ತರಾಟೆಗೆ ತೆಗೆದುಕೊಂಡಿದೆ. ಎರಡು ಜೊತೆ ಸಮವಸ್ತ್ರ, ಒಂದು ಜೊತೆ ಶೂ, ಎರಡು ಜೊತೆ ಸಾಕ್ಸ್ ನೀಡಲು ಆದೇಶಿಸಲಾಗಿತ್ತು. 2018ರ ಹೈಕೋರ್ಟ್ ಆದೇಶ ಪಾಲನೆಯಾಗಿಲ್ಲ ಎಂದು ಕೊಪ್ಪಳದ ಮಂಜುನಾಥ್ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು. ಎರಡು ವಾರದಲ್ಲಿ ಆದೇಶ ಪಾಲಿಸಲು ಹೈಕೋರ್ಟ್ ಸೂಚನೆ ನೀಡಿದೆ.