ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆಯ ಆರ್ಭಟ ಶುರುವಾಗಿದ್ದು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಜನ ಜೀವನ ಅಸ್ಥವ್ಯಸ್ಥಗೊಂಡಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಕುಮಾರಧಾರಾ, ನೇತ್ರಾವತಿ, ಸೌಪರ್ಣಿಕ, ವಾರಾಹಿ, ಶಾಂಭವೀ ಮತ್ತು ಗುಂಡಬಾಳು ಸೇರಿ ಹಲವು ನದಿಗಳ ನೀರಿನಮಟ್ಟ ಹೆಚ್ಚಳವಾಗಿ ತೀರ ಪ್ರದೇಶದಲ್ಲಿ ಆತಂಕ ನಿರ್ಮಾಣವಾಗಿದೆ.
ಕರಾವಳಿ ಜಿಲ್ಲೆಗಳಲ್ಲಿ ಹಲವು ಮನೆಗಳಿಗೆ ನೀರು ನುಗ್ಗಿದ್ದು, 650 ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. 100 ಕ್ಕೂ ಹೆಚ್ಚು ಮಂದಿಯನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ. ಮಳೆ ಸಂಬಂಧಿ ಅವಘಡದಲ್ಲಿ ಇಬ್ಬರು ನೀರು ಪಾಲಾಗಿದ್ದಾರೆ.
ಭಾರೀ ಮಳೆ ಹಿನ್ನೆಲೆಯಲ್ಲಿ 5 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ರಾಜ್ಯದ 5 ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿನ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿವೆ.
ಇಂದು ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ
ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಎಚ್ಚರಿಕೆ ನೀಡಿದೆ. ಮುಂದಿನ 24 ಗಂಟೆಗಳಲ್ಲಿ ಈ ಜಿಲ್ಲೆಗಳಲ್ಲಿ 20 ಸೆಂ.ಮೀ ಮಳೆಯಾಗುವ ಸಾಧ್ಯತೆ ಇದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.