ನವದೆಹಲಿ: ಪುಣೆಯ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಸಿಇಓ ಆದಾರ್ ಪೂನಾವಾಲಾ ಅವರಿಗೆ ವೈ ಕೆಟಗರಿ ಭದ್ರತೆ ನೀಡಲು ಕೇಂದ್ರ ಗೃಹ ಮಂತ್ರಾಲಯ ಆದೇಶ ಹೊರಡಿಸಿದೆ.
ಸಿಆರ್ಪಿಎಫ್ ಯೋಧರು ಅವರಿಗೆ ಭದ್ರತೆ ಒದಗಿಸಲಿದ್ದಾರೆ. ದೇಶದಾದ್ಯಂತ ಆದಾರ್ ಪೂನಾವಾಲಾ ಅವರು ವೈ ಕೆಟಗರಿ ಭದ್ರತೆ ಪಡೆಯಲಿದ್ದಾರೆ ಎಂದು ಗೃಹ ವ್ಯವಹಾರಗಳ ಸಚಿವಾಲಯ ತಿಳಿಸಿದೆ. ಭದ್ರತಾ ವಿಭಾಗದಲ್ಲಿ ಒಬ್ಬರು ಅಥವಾ ಇಬ್ಬರು ಕಮಾಂಡೋಗಳು ಪೊಲೀಸರು ಸೇರಿ 11 ಸಿಬ್ಬಂದಿ ಇರಲಿದ್ದಾರೆ.
ದೇಶದ ಅತಿದೊಡ್ಡ ಲಸಿಕೆ ಉತ್ಪಾದಕ ಸಂಸ್ಥೆಯಾಗಿರುವ ಪುಣೆಯ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಕೋವಿಶೀಲ್ಡ್ ಲಸಿಕೆಯನ್ನು ಭಾರತದಲ್ಲಿ ಉತ್ಪಾದಿಸುತ್ತಿದೆ. ಲಸಿಕೆ ಬೆಲೆಯನ್ನು ಇಳಿಕೆ ಮಾಡಿದ್ದು, ರಾಜ್ಯ ಸರ್ಕಾರಗಳಿಗೆ 300 ರೂಪಾಯಿ ದರದಲ್ಲಿ ಮಾರಾಟ ಮಾಡಲಿದೆ.
ಏಪ್ರಿಲ್ 16 ರಂದು ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ನಿರ್ದೇಶಕ ಪ್ರಕಾಶ್ ಕುಮಾರ್ ಸಿಂಗ್ ಅವರು ಆದಾರ್ ಪೂನಾವಾಲಾ ಅವರಿಗೆ ಭದ್ರತೆ ನೀಡಲು ಪತ್ರ ಬರೆದು ಮನವಿ ಮಾಡಿದ್ದರು. ಪ್ರಧಾನಿ ಮೋದಿ ಅವರ ನಾಯಕತ್ವದಲ್ಲಿ ಭಾರತ ಸರ್ಕಾರದೊಂದಿಗೆ ಕೋವಿಡ್ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುತ್ತಿದೆ. ಸಿಇಒ ಆದಾರ್ ಪೂನಾವಾಲಾ ಅವರಿಗೆ ಲಸಿಕೆ ಸರಬರಾಜಿಗೆ ಸಂಬಂಧಿಸಿದಂತೆ ವಿವಿಧ ಜನರಿಂದ ಅವರಿಗೆ ಬೆದರಿಕೆ ಬರುತ್ತಿವೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದರು. ಈ ಹಿನ್ನಲೆಯಲ್ಲಿ ವೈ ಕೆಟಗರಿ ಭದ್ರತೆ ನೀಡಲಾಗಿದೆ.