ಬೆಂಗಳೂರು: ರಾಜ್ಯ ವಿಧಾನಮಂಡಲ ಅಧಿವೇಶನ ಇಂದಿನಿಂದ ಆರಂಭವಾಗಲಿದ್ದು, ಮಾರ್ಚ್ 31 ರವರೆಗೆ ನಡೆಯಲಿದೆ.
ಆಡಳಿತ ಪಕ್ಷವನ್ನು ತರಾಟೆಗೆ ತೆಗೆದುಕೊಳ್ಳಲು ಪ್ರತಿಪಕ್ಷಗಳು ರಣತಂತ್ರ ರೂಪಿಸಿವೆ. ಮಾರ್ಚ್ 8 ರಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಜೆಟ್ ಮಂಡಿಸಲಿದ್ದಾರೆ. ಇಂದಿನಿಂದ ಆರಂಭವಾಗಲಿರುವ ಅಧಿವೇಶನದಲ್ಲಿ ಎರಡು ದಿನ ‘ಒಂದು ರಾಷ್ಟ್ರ ಒಂದು ಚುನಾವಣೆ’ ವಿಚಾರವಾಗಿ ವಿಧಾನಸಭೆಯಲ್ಲಿ ವಿಶೇಷ ಚರ್ಚೆ ನಡೆಯಲಿದೆ. ವಿಧಾನ ಪರಿಷತ್ ನಲ್ಲಿ ಪ್ರಶ್ನೋತ್ತರ ಕಲಾಪದ ನಂತರ ಚರ್ಚೆಗೆ ಅವಕಾಶ ನೀಡಲಾಗುವುದು.
ಇಂದಿನಿಂದ ಮಾರ್ಚ್ 31 ರವರೆಗೆ ವಿಧಾನಮಂಡಲ ಅಧಿವೇಶನ ನಡೆಯಲಿದ್ದು ಅಧಿವೇಶನ ನಡೆಯುವ ದಿನಗಳಂದು ವಿಧಾನಸೌಧ ಸುತ್ತಮುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಪ್ರತಿಭಟನೆ, ಮೆರವಣಿಗೆ ನಡೆಯುವ ಸಾಧ್ಯತೆ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.