ಬೆಂಗಳೂರು: ಬೆಳಗಾವಿಯ ಸುವರ್ಣಸೌಧದಲ್ಲಿ ಸೋಮವಾರದಿಂದ ಆರಂಭವಾಗುವ ಚಳಿಗಾಲದ ಅಧಿವೇಶನದಲ್ಲಿ ಆಡಳಿತರೂಢ ಕಾಂಗ್ರೆಸ್ ಸರ್ಕಾರವನ್ನು ಕಟ್ಟಿ ಹಾಕುವ ಉದ್ದೇಶದಿಂದ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಮಹತ್ವದ ಸಭೆ ನಡೆಸಿದ್ದಾರೆ.
ಕಾಂಗ್ರೆಸ್ ಸರ್ಕಾರದ ವೈಫಲ್ಯಗಳು, ಜನ ವಿರೋಧಿ ನೀತಿ ವಿರುದ್ಧ ಜಂಟಿಯಾಗಿ ಹೋರಾಟ ನಡೆಸಲು ಉಭಯ ಪಕ್ಷಗಳ ನಾಯಕರು ತೀರ್ಮಾನಿಸಿದ್ದಾರೆ. ಪ್ರತಿಪಕ್ಷ ನಾಯಕ ಆರ್. ಅಶೋಕ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಹೆಚ್.ಡಿ. ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಆರ್. ಅಶೋಕ್, ಜಿ.ಟಿ. ದೇವೇಗೌಡ ಮೊದಲಾದ ನಾಯಕರು ಭಾಗವಹಿಸಿ ಸಮಾಲೋಚನೆ ನಡೆಸಿದ್ದಾರೆ.
ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ವೈಫಲ್ಯ, ಬರ ನಿರ್ವಹಣೆ ವೈಫಲ್ಯ, ಗುತ್ತಿಗೆದಾರರಿಂದ ಕಮಿಷನ್ ಪಡೆದ ಆರೋಪ, ಗುತ್ತಿಗೆದಾರರ ಆತ್ಮಹತ್ಯೆ, ಶಾಸಕರಿಗೆ ಅನುದಾನ ಕಡಿತ, ಅಭಿವೃದ್ಧಿ ಕಾರ್ಯ ಸ್ಥಗಿತ, ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆ ಅನುಮತಿ ವಾಪಸ್ ಪಡೆದ ವಿಚಾರ, ಸ್ಪೀಕರ್ ಪೀಠದ ಬಗ್ಗೆ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆ, ಜಾತಿ ಗಣತಿ ವರದಿ ಸೇರಿದಂತೆ ಹಲವು ವಿಚಾರಗಳನ್ನು ಮುಂದಿಟ್ಟುಕೊಂಡು ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ಸಮಾಲೋಚನೆ ನಡೆಸಿದ್ದು, ಜಂಟಿ ಸಮರಕ್ಕೆ ಕಾರ್ಯತಂತ್ರ ರೂಪಿಸಲಾಗಿದೆ.