ಬೆಂಗಳೂರು: ರಾಜ್ಯದಲ್ಲಿ ಮೇ 31 ರಿಂದ ಶಾಲೆಗಳು ಆರಂಭವಾಗಲಿದ್ದು, ಒಂದರಿಂದ ಹತ್ತನೇ ತರಗತಿ ಮಕ್ಕಳಿಗೆ ಸೇತುಬಂಧ ಕಾರ್ಯಕ್ರಮ ನಡೆಸಲು ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ಸೂಚನೆ ನೀಡಿದೆ.
ಶಾಲಾ ಚಟುವಟಿಕೆ ಮೇ 31 ರಿಂದ ಆರಂಭವಾಗಲಿದ್ದು, ಒಂದರಿಂದ ಮೂರನೇ ತರಗತಿ ಮಕ್ಕಳಿಗೆ ಆರಂಭದ 30 ದಿನಗಳ ಕಾಲ ಹಾಗೂ ನಾಲ್ಕರಿಂದ 10ನೆಯ ತರಗತಿ ಮಕ್ಕಳಿಗೆ 15 ದಿನಗಳ ಕಾಲ ಸೇತುಬಂಧ ಕಾರ್ಯಕ್ರಮ ನಡೆಸುವಂತೆ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ಸೂಚನೆ ನೀಡಿದೆ.
ಮಕ್ಕಳಲ್ಲಿ ಕಲಿಕಾ ಅಂತರ ತಗ್ಗಿಸುವ ಉದ್ದೇಶದಿಂದ ಸೇತುಬಂಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಒಂದರಿಂದ ಹತ್ತನೇ ತರಗತಿ ಮಕ್ಕಳಿಗೆ ಸೇತುಬಂಧ ಶಿಕ್ಷಣದ ಸಾಹಿತ್ಯ ಮತ್ತು ವಿನ್ಯಾಸವನ್ನು ಸಿದ್ದುಪಡಿಸಿ desert.karnataka.gov.in/info-sethubandha ನಲ್ಲಿ ಅಪ್ಲೋಡ್ ಮಾಡಲಾಗಿದೆ.
ಮಕ್ಕಳ ವಯೋಮಾನ ಮತ್ತು ತರಗತಿಗೆ ಅನುಗುಣವಾಗಿ ಕಲಿಕಾ ಮಟ್ಟ ಸಾಮರ್ಥ್ಯ ಗುರುತಿಸಿ ಮುಂದಿನ ಕಲಿಕೆಗೆ ಸಿದ್ಧಗೊಳಿಸಲು ಕಲಿತಿರುವ, ಕಲಿಯುತ್ತಿರುವ ಪರಿಕಲ್ಪನೆಗಳ ಅಂತರದ ನಡುವೆ ಸಂಬಂಧ ಕಲ್ಪಿಸುವುದು ಸೇತುಬಂಧ ಶಿಕ್ಷಣದ ಉದ್ದೇಶವಾಗಿದೆ.