ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ, ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ತಾನು ನೀಡಿದ್ದ ಭರವಸೆಯಂತೆ ‘ಶಕ್ತಿ’ ಯೋಜನೆಯನ್ನು ಜಾರಿಗೆ ತಂದಿದ್ದು, ಇದರಡಿ ಮಹಿಳೆಯರಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿತ್ತು.
ಈ ಯೋಜನೆಗಳ ಕುರಿತು ಸಾರ್ವಜನಿಕ ವಲಯದಲ್ಲಿ ಹಲವು ಅಭಿಪ್ರಾಯಗಳು ವ್ಯಕ್ತವಾಗುತ್ತಿದ್ದರ ಮಧ್ಯೆ ಲೋಕಸಭಾ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ವಿಪಕ್ಷಗಳ ನಾಯಕರು, ಈ ಚುನಾವಣೆಯ ನಂತರ ‘ಶಕ್ತಿ’ ಸೇರಿದಂತೆ ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ರದ್ದಾಗಲಿವೆ ಎಂದು ಹೇಳಿದ್ದರು.
ಇದೀಗ ಈ ಕುರಿತಂತೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಾರಿಗೆ ನಿಗಮಗಳಿಗೂ, ರಾಜ್ಯದ ಮಹಿಳೆಯರಿಗೂ ಶಕ್ತಿ ತಂದು ಕೊಟ್ಟಿರುವ ಗ್ಯಾರಂಟಿ ಯೋಜನೆ ‘ಶಕ್ತಿ’ ರದ್ದುಪಡಿಸುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟ ಮಾತುಗಳಲ್ಲಿ ತಿಳಿಸಿದ್ದಾರೆ.