ಬೆಂಗಳೂರು: ಮಹಿಳೆಯರ ಉಚಿತ ಬಸ್ ಸಂಚಾರಕ್ಕೆ ಆರಂಭಿಸಿದ ಶಕ್ತಿ ಯೋಜನೆಯ ಸ್ಮಾರ್ಟ್ ಕಾರ್ಡ್ ಗೆ ಅರ್ಜಿಗಳನ್ನು ಏಕಾಏಕಿ ಬಿಡುಗಡೆ ಮಾಡಲಾಗುವುದಿಲ್ಲ. ಸ್ಮಾರ್ಟ್ ಕಾರ್ಡ್ ನಲ್ಲಿ ಏನೇನು ಇರಬೇಕು ಎಂಬುದರ ಬಗ್ಗೆ ಚರ್ಚೆ ನಡೆಸಿ ಅದನ್ನು ಸಿದ್ಧಪಡಿಸಿಕೊಂಡು ಅರ್ಜಿ ಬಿಡುಗಡೆ ಮಾಡಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಜೂನ್ 11ರಂದು ಶಕ್ತಿ ಯೋಜನೆ ಆರಂಭವಾಗಿದ್ದು, ಜೂನ್ 15ರಿಂದ ಸ್ಮಾರ್ಟ್ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದು ಎಂದು ಈ ಹಿಂದೆ ಹೇಳಲಾಗಿತ್ತು. ಆದರೆ, ಸ್ಮಾರ್ಟ್ ಕಾರ್ಡ್ ನಲ್ಲಿ ಏನೆಲ್ಲಾ ಅಂಶಗಳಿರಬೇಕು ಎಂಬುದರ ಬಗ್ಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಸ್ಮಾರ್ಟ್ ಕಾರ್ಡ್ ಕೇಂದ್ರಗಳನ್ನು ಹೆಚ್ಚು ಮಾಡಿಕೊಳ್ಳಬೇಕು. ಅಲ್ಪಾವಧಿ ಟೆಂಡರ್ ಕರೆಯಬೇಕು. ಇದಕ್ಕಾಗಿ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ ಎಂದು ತಿಳಿಸಿದ್ದಾರೆ.
ಉಚಿತ ಪ್ರಯಾಣ ಶಕ್ತಿ ಯೋಜನೆಗೆ ಉತ್ತಮ ಪ್ರತಿಕ್ರಿಯೆ ವ್ಯರ್ಥವಾಗುತ್ತಿದ್ದು, ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಯೋಜನೆ ಬಳಸಿಕೊಳ್ಳುತ್ತಿದ್ದಾರೆ. ಧಾರ್ಮಿಕ ಕ್ಷೇತ್ರಗಳತ್ತ ಹೋಗುವವರ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ನಾಲ್ಕು ನಿಗಮಗಳ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.