ಬೆಂಗಳೂರು: ಮುಖ್ಯಮಂತ್ರಿ ಸ್ಥಾನದಿಂದ ಯಡಿಯೂರಪ್ಪರನ್ನು ಬದಲಿಸಬಾರದು ಎಂದು ಕಾಂಗ್ರೆಸ್ ಪಕ್ಷದ ನಾಯಕ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.
ಇಡೀ ಲಿಂಗಾಯಿತ ಸಮುದಾಯ ಯಡಿಯೂರಪ್ಪನವರ ಪರವಾಗಿದೆ. ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಬೇಕು. ಬದಲಾವಣೆ ಮಾಡಿದರೆ ಸಮುದಾಯ ಮುಂದೆ ಹೋಗಲಿದೆ ಎಂದು ತಿಳಿಸಿದ್ದಾರೆ.
ಯಡಿಯೂರಪ್ಪನವರನ್ನು ಬದಲಿಸಿದರೆ ಬಿಜೆಪಿ ಇತಿಹಾಸ ಮುಗಿದಂತೆ ಎಂದು ಮುಖ್ಯಮಂತ್ರಿ ಭೇಟಿ ಬಳಿಕ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ. ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ ಇಂದು ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದಾರೆ. ಭೇಟಿಯ ನಂತರ ಮಾತನಾಡಿದ ಅವರು, ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿಯಾಗಿ ಮುಂದುವರೆಸಬೇಕೆಂದು ಒತ್ತಾಯಿಸಿದ್ದಾರೆ.
ಈ ಮೂಲಕ ವೀರಶೈವ ಮಹಾಸಭಾ ಸಿಎಂ ಬೆನ್ನಿಗೆ ನಿಂತಿದ್ದು, ಶಾಮನೂರು ಶಿವಶಂಕರಪ್ಪ ನೇತೃತ್ವದಲ್ಲಿ ಯಡಿಯೂರಪ್ಪ ಅವರನ್ನು ಭೇಟಿಯಾಗಿ ನೈತಿಕ ಬೆಂಬಲ ನೀಡಲಾಗಿದೆ. ನಿಮ್ಮ ಜೊತೆ ನಾವಿದ್ದೇವೆ ಎಂಬ ಸಂದೇಶ ರವಾನಿಸಲಾಗಿದೆ.