ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಪಾದಯಾತ್ರೆಯ ಉತ್ತಮ ಉದಾಹರಣೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಅಧ್ಯಕ್ಷ ಶರದ್ ಪವಾರ್ ಬಣ್ಣಿಸಿದ್ದಾರೆ. ಜೊತೆಗೆ ರಾಹುಲ್ ಗಾಂಧಿ ಸಿದ್ಧಾಂತವು ಇನ್ನೂ ಹೆಚ್ಚಿನ ಬೆಂಬಲವನ್ನು ಗಳಿಸಲಿದೆ ಎಂದು ಭವಿಷ್ಯ ನುಡಿದಿದ್ದಾರೆ.
ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶವು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಪಾದಯಾತ್ರೆಯ ಅತ್ಯುತ್ತಮ ಉದಾಹರಣೆಯಾಗಿದೆ. ರಾಹುಲ್ ಗಾಂಧಿ ಬಗ್ಗೆ ಏನೇ ಹೇಳಿದರೂ ಜನರು ರಾಹುಲ್ ಗಾಂಧಿಯವರ ಸಿದ್ಧಾಂತವನ್ನು ಬಲಪಡಿಸುತ್ತಾರೆ ಎಂದು ನನಗೆ ಖಾತ್ರಿಯಿದೆ ಎಂದು ಪವಾರ್ ಪುಣೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
2024ರ ಲೋಕಸಭೆ ಚುನಾವಣೆಗೆ ಪ್ರಧಾನಿ ಅಭ್ಯರ್ಥಿಯಾಗಿರುವ ಬಗ್ಗೆ ಪ್ರಶ್ನಿಸಿದ ಪವಾರ್, “ನಾನು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ, ಹಾಗಾಗಿ ಪ್ರಧಾನಿ ಅಭ್ಯರ್ಥಿಯಾಗುವ ಪ್ರಶ್ನೆ ಎಲ್ಲಿದೆ ? ನಾನು ಪ್ರಧಾನಿಯಾಗುವ ರೇಸ್‌ನಲ್ಲಿ ಇಲ್ಲ. ನಮಗೆ ರಾಷ್ಟ್ರದ ಅಭಿವೃದ್ಧಿಗೆ ಶ್ರಮಿಸುವ ನಾಯಕ ಬೇಕು” ಎಂದು ಉತ್ತರಿಸಿದ್ದಾರೆ.
ಮುಂಬರುವ ಲೋಕಸಭೆ ಚುನಾವಣೆಗೆ ಮಹಾ ವಿಕಾಸ್ ಅಘಾಡಿ (ಎಂವಿಎ) ಪಾಲುದಾರರ ನಡುವೆ ಸೀಟು ಹಂಚಿಕೆ ಕುರಿತು ಮಾತನಾಡಿದ ಪವಾರ್, ಇದು ಇನ್ನೂ ನಿರ್ಧರಿಸಲಾಗಿಲ್ಲ. ಶಿವಸೇನಾ (ಯುಬಿಟಿ) ನಾಯಕ ಉದ್ಧವ್ ಠಾಕ್ರೆ, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅಥವಾ ಮಲ್ಲಿಕಾರ್ಜುನ ಖರ್ಗೆ ಈ ಬಗ್ಗೆ ನಿರ್ಧಾರ ಮಾಡುತ್ತಾರೆ ಎಂದು ಹೇಳಿದ್ದಾರೆ.