ನವದೆಹಲಿ: ಎನ್.ಸಿ.ಪಿ. ನಾಯಕ ಶರದ್ ಪವಾರ್ ಅವರನ್ನು ರಾಷ್ಟ್ರಪತಿ ಅಭ್ಯರ್ಥಿ ಚುನಾವಣೆಯಲ್ಲಿ ಕಣಕ್ಕಿಳಿಸಲು ವಿರೋಧ ಪಕ್ಷಗಳ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.
ಆದರೆ, ರಾಷ್ಟ್ರಪತಿ ಅಭ್ಯರ್ಥಿಯಾಗಲು ಶರದ್ ಪವಾರ್ ನಿರಾಕರಿಸಿದ್ದಾರೆ. ಶರದ್ ಪವಾರ್ ಅವರನ್ನು ರಾಷ್ಟ್ರಪತಿ ಚುನಾವಣೆಯಲ್ಲಿ ಒಮ್ಮತದ ಅಭ್ಯರ್ಥಿಯಾಗಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಫಾರೂಕ್ ಅಬ್ದುಲ್ಲಾ ಮತ್ತು ಗೋಪಾಲಕೃಷ್ಣ ಗಾಂಧಿ ಹೆಸರು ಕೂಡ ಪ್ರಸ್ತಾಪವಾಗಿದ್ದು, ಇನ್ನೂ ಕೆಲವು ಸುತ್ತಿನ ಸಭೆ ನಡೆಸಲಾಗುವುದು ಎಂದು ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಆದರೆ, ವಿಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿಯಾಗುವ ಪ್ರಸ್ತಾಪವನ್ನು ಶರದ್ ಪವಾರ್ ತಿರಸ್ಕರಿಸಿದ್ದಾರೆ. 81 ವರ್ಷದ ಶರದ್ ಪವಾರ್ ಅವರು ತಮ್ಮ ಪಕ್ಷದ ನಾಯಕರೊಂದಿಗಿನ ಸಭೆಯಲ್ಲಿ ಉನ್ನತ ಹುದ್ದೆಯ ಬಗ್ಗೆ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.
ಎಲ್ಲ ಪಕ್ಷಗಳು ಎನ್.ಸಿ.ಪಿ. ನಾಯಕ ಶರದ್ ಪವಾರ್ ಅವರನ್ನು ರಾಷ್ಟ್ರಪತಿ ಚುನಾವಣೆಯಲ್ಲಿ ಪ್ರತಿಪಕ್ಷಗಳ ಅಭ್ಯರ್ಥಿಯಾಗಿ ಸ್ಪರ್ಧಿಸುವಂತೆ ವಿನಂತಿಸಿದವು, ಆದರೆ ಅವರು ನಿರಾಕರಿಸಿದರು. ಪವಾರ್ ನಿರಾಕರಿಸಿದ ನಂತರ, ಅವರನ್ನು ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಮಮತಾ ಬ್ಯಾನರ್ಜಿ ಭೇಟಿಯಾಗಿ ಜಂಟಿ ವಿರೋಧ ಪಕ್ಷದ ರಾಷ್ಟ್ರಪತಿ ಅಭ್ಯರ್ಥಿಯಾಗಲು ವಿನಂತಿಸಿದರು ಎಂದು ಡಿಎಂಕೆಯ ಟಿ.ಆರ್. ಬಾಲು ತಿಳಿಸಿದ್ದಾರೆ.
ಕಾಂಗ್ರೆಸ್, ಸಮಾಜವಾದಿ ಪಕ್ಷ, ಎನ್.ಸಿ.ಪಿ., ಡಿಎಂಕೆ, ಆರ್.ಜೆ.ಡಿ. ಮತ್ತು ಎಡಪಕ್ಷಗಳ ನಾಯಕರು ತೃಣಮೂಲ ಕಾಂಗ್ರೆಸ್ ವರಿಷ್ಠರು ಕರೆದ ಸಭೆಯಲ್ಲಿ ಭಾಗವಹಿಸಿದ್ದರೆ, ಎಎಪಿ, ತೆಲಂಗಾಣ ರಾಷ್ಟ್ರ ಸಮಿತಿ(ಟಿಆರ್‌ಎಸ್), ಮತ್ತು ಒಡಿಶಾದ ಆಡಳಿತಾರೂಢ ಬಿಜೆಡಿ ದೂರ ಉಳಿದಿದ್ದವು.