ಬೆಂಗಳೂರು: ರಾಜ್ಯದಲ್ಲಿ ಪ್ರತಿ ಜಿಲ್ಲೆಗೊಂದು ಸರ್ಕಾರಿ ಮೆಡಿಕಲ್ ಕಾಲೇಜು ಆರಂಭಿಸಬೇಕೆಂಬುದು ಸರ್ಕಾರದ ನೀತಿಯಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.
ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯ ಮಂಜುನಾಥ ಭಂಡಾರಿ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಸರ್ಕಾರದ ನೀತಿ ಅನ್ವಯ ಪ್ರತಿ ಜಿಲ್ಲೆಗೊಂದು ಸರ್ಕಾರಿ ಮೆಡಿಕಲ್ ಕಾಲೇಜು ಆರಂಭಿಸಲಾಗುವುದು. ಅನುದಾನದ ಲಭ್ಯತೆ ಆಧರಿಸಿ ಮೆಡಿಕಲ್ ಕಾಲೇಜುಗಳನ್ನು ಸ್ಥಾಪಿಸಲಾಗುವುದು ಎಂದು ತಿಳಿಸಿದ್ದಾರೆ.
ಪ್ರಸ್ತುತ ರಾಜ್ಯದಲ್ಲಿ 22 ಸರ್ಕಾರಿ ಮೆಡಿಕಲ್ ಕಾಲೇಜು ಕಾರ್ಯ ನಿರ್ವಹಿಸುತ್ತಿವೆ. ಉಡುಪಿ, ಬಾಗಲಕೋಟೆ, ಕೋಲಾರ, ರಾಮನಗರ, ತುಮಕೂರು, ವಿಜಯಪುರ, ಬೆಂಗಳೂರು ಗ್ರಾಮಾಂತರ ಮೊದಲಾದ ಜಿಲ್ಲೆಗಳಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳು ಇಲ್ಲ. ಸರ್ಕಾರದಿಂದ ಹೊಸ ವೈದ್ಯಕೀಯ ಕಾಲೇಜು ಸ್ಥಾಪಿಸಲು ಅಂದಾಜು 610 ಕೋಟಿ ರೂ. ಅನಾವರ್ತಕ ವೆಚ್ಚ ಮತ್ತು ವಾರ್ಷಿಕ 60 ಕೋಟಿ ರೂಗಳ ಆವರ್ತಕ ವೆಚ್ಚದ ಅವಶ್ಯಕತೆ ಇದ್ದು, ಅನುದಾನ ಲಭ್ಯತೆ ಆಧಾರದ ಮೇಲೆ ಕಾಲೇಜು ಇಲ್ಲದ ಕಡೆಗಳಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜುಗಳನ್ನು ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ.