ಕಲಬುರಗಿ: ರೋಗಿಗಳಿಗೆ ಕಡಿಮೆ ಖರ್ಚಿನಲ್ಲಿ ಗುಣಮಟ್ಟದ ಚಿಕಿತ್ಸೆ ನೀಡಲು ಸಹಕಾರಿಯಾಗುವಂತೆ ರಾಜ್ಯದ ಮೂರು ಕಡೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.
ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಭಾಗಿಯ ಕೇಂದ್ರಗಳಾದ ಮೈಸೂರು, ಕಲಬುರ್ಗಿ, ಬೆಳಗಾವಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ನಿರ್ಮಿಸಲಾಗುವುದು. ರೋಗಿಗಳಿಗೆ ಕಡಿಮೆ ಖರ್ಚಿನಲ್ಲಿ ಗುಣಮಟ್ಟದ ಚಿಕಿತ್ಸೆ ನೀಡಲು ಸಹಕಾರಿಯಾಗಲಿವೆ ಎಂದು ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಏಮ್ಸ್ ಸ್ಥಾಪನೆ ಮಾಡದೇ ಕೇಂದ್ರ ಸರ್ಕಾರ ತಾರತಮ್ಯ ಮಾಡಿದೆ ಎಂದು ದೂರಿದ ಸಚಿವರು, ಕಲ್ಬುರ್ಗಿಯಲ್ಲಿರುವ ಬೃಹತ್ ಇಎಸ್ಐಸಿ ಆಸ್ಪತ್ರೆ ಮತ್ತು ಮೆಡಿಕಲ್ ಕಾಲೇಜನ್ನು ಏಮ್ಸ್ ಆಗಿ ಮೇಲ್ದರ್ಜೆಗೇರಿಸುವಂತೆ ಹಲವು ಬಾರಿ ಮನವಿ ಮಾಡಿದರೂ ಸ್ಪಂದಿಸಿಲ್ಲ. 50 ಎಕರೆ ಜಾಗ, ಅತ್ಯಾಧುನಿಕ ಕಟ್ಟಡ, ಸಕಲ ಸೌಲಭ್ಯ ಹಾಗೂ ಹೆಚ್ಚಿನ ಬೇಡಿಕೆ ಇದ್ದರೂ ಕೇಂದ್ರ ಸ್ಪಂದಿಸಿಲ್ಲ. ಈ ಬಗ್ಗೆ ಮತ್ತೊಮ್ಮೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ.
150 ಕೋಟಿ ರೂಪಾಯಿ ವೆಚ್ಚದಲ್ಲಿ ಕಲಬುರ್ಗಿಯಲ್ಲಿ ನಿರ್ಮಾಣವಾಗುತ್ತಿರುವ ಜಯದೇವ ಹೃದ್ರೋಗ ಆಸ್ಪತ್ರೆ ಕಟ್ಟಡ 6 -7 ತಿಂಗಳಲ್ಲಿ ಪೂರ್ಣವಾಗಲಿದೆ. ಈ ಸಂಸ್ಥೆಯ ಕಟ್ಟಡದ ಮೇಲಿನ ಮೂರು ಮಹಡಿಗಳನ್ನು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಬಳಕೆ ಮಾಡಿಕೊಳ್ಳಲಾಗುತ್ತದೆ. ವೈದ್ಯಕೀಯ ಕಾಲೇಜುಗಳಲ್ಲಿ ಸೀಟು ಹೆಚ್ಚಳ ಕುರಿತಾಗಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಹೇಳಿದ್ದಾರೆ.