ಬೆಂಗಳೂರು: ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದ ಬಿಜೆಪಿ ಸಂಸದ ಬಿ.ಎನ್. ಬಚ್ಚೇಗೌಡ ಅವರ ಪುತ್ರ, ಹೊಸಕೋಟೆ ಕ್ಷೇತ್ರದ ಶಾಸಕ ಶರತ್ ಬಚ್ಚೇಗೌಡ ಫೆಬ್ರವರಿ 26 ರಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.
ಪಕ್ಷೇತರ ಶಾಸಕರಾದ ಶರತ್ ಬಚ್ಚೇಗೌಡ ಕಾಂಗ್ರೆಸ್ ಸೇರ್ಪಡೆಗೆ ವೇದಿಕೆ ಸಿದ್ಧವಾಗಿದೆ. ಕೆಪಿಸಿಸಿ ಕಛೇರಿಯಲ್ಲಿ ಫೆಬ್ರವರಿ 26 ರಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕಾಂಗ್ರೆಸ್ ಶಾಸಕಾಂಗ ನಾಯಕ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.
2018 ರ ವಿಧಾನಸಭೆ ಚುನಾವಣೆಯಲ್ಲಿ ಶರತ್ ಬಚ್ಚೇಗೌಡ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಭವಗೊಂಡಿದ್ದರು. ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಎಂಟಿಬಿ ನಾಗರಾಜ್ ಜಯಗಳಿಸಿದ್ದರು. ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ಸಚಿವರಾಗಿದ್ದ ಎಂಟಿಬಿ ನಾಗರಾಜ್ ಬದಲಾದ ರಾಜಕೀಯ ಬೆಳವಣಿಗೆಯಲ್ಲಿ ಬಿಜೆಪಿಗೆ ಸೇರ್ಪಡೆಯಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಎಂಟಿಬಿ ನಾಗರಾಜ್ ಪರಾಭವಗೊಂಡಿದ್ದು, ಪಕ್ಷೇತರ ಅಭ್ಯರ್ಥಿಯಾದ ಶರತ್ ಬಚ್ಚೇಗೌಡ ಜಯಗಳಿಸಿ ಶಾಸಕರಾಗಿದ್ದಾರೆ. ಈಗ ಅವರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದು ಮುಂದಿನ ತಿಂಗಳು ಬೃಹತ್ ಸಮಾವೇಶ ನಡೆಸಿ ಶಕ್ತಿಪ್ರದರ್ಶನಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ.