ಬೆಂಗಳೂರು: ಆಯವ್ಯಯದಲ್ಲಿ ಘೋಷಿಸಲಾಗಿದ್ದ ಮುಜರಾಯಿ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆ “ಕಾಶಿ ಯಾತ್ರೆ” ಗೆ ಮಾರ್ಗಸೂಚಿಗಳನ್ನು ಅಂತಿಮಗೊಳಿಸಿ ಸರ್ಕಾರದಿಂದ ಅಂತಿಮ ಆದೇಶ ಹೊರಡಿಸಲಾಗಿದೆ ಎಂದು ಮುಜರಾಯಿ ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಅ ಜೊಲ್ಲೆ ತಿಳಿಸಿದ್ದಾರೆ.
ರಾಜ್ಯದಿಂದ ಕಾಶಿ ಯಾತ್ರೆ ಕೈಗೊಂಡ ಅರ್ಹ ಯಾತ್ರಾರ್ಥಿಗಳಿಗೆ ತಲಾ 5,೦೦೦ ರೂ. ಸಹಾಯ ಧನ ನೀಡಲಾಗುವುದು.
ಕರ್ನಾಟಕದ ಖಾಯಂ ನಿವಾಸಿಗಳು ಮಾತ್ರ ಈ ಧನ ಸಹಾಯ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ. ಕರ್ನಾಟಕ ರಾಜ್ಯ ಚುನಾವಣಾ ಆಯೋಗ ನೀಡಿರುವ “ಗುರುತಿನ ಚೀಟಿ’ ಅಥವಾ ಆಧಾರ್ ಗುರುತಿನ ಚೀಟಿ ಅಥವಾ ರೇಷನ್ ಕಾರ್ಡ್ ನಲ್ಲಿ ವುದಾದರೂ ಒಂದು ದಾಖಲೆ ಕಡ್ಡಾಯವಾಗಿ ನೀಡಬೇಕಿದೆ.
ರಾಜ್ಯದಿಂದ ಕಾಶಿ ಯಾತ್ರೆ ಕೈಗೊಳ್ಳುವ ಯಾತ್ರಾರ್ಥಿಗಳು ಆಯಾ ಆರ್ಥಿಕ ವರ್ಷದ ಮೊದಲ ದಿನಕ್ಕೆ ಅನ್ವಯಿಸುವಂತೆ ಏಪ್ರಿಲ್ 1 ಕ್ಕೆ 18 ವರ್ಷಗಳ ಮೇಲ್ಪಟ್ಟವರಾಗಿರತಕ್ಕದ್ದು, 18 ವಯಸ್ಸಿನ ಕೆಳಗಿನವರ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. 18 ವರ್ಷ ಮೇಲ್ಪಟ್ಟ ಯಾತ್ರಾರ್ಥಿಗಳು ವಯಸ್ಸಿಗೆ ಸಂಬಂಧಿಸಿದ ಸೂಕ್ತ ದಾಖಲೆಯನ್ನು ಹಾಜರುಪಡಿಸುವುದು,
2022 ರ ಏಪ್ರಿಲ್ 1 ರಿಂದ ಜೂನ್ 30 ರವರೆಗೆ ಕಾಶಿ ಶ್ರೀ ವಿಶ್ವನಾಥ ಸ್ವಾಮಿಯ ದರ್ಶನಕ್ಕೆ ತೆರಳಿದ ಯಾತ್ರಾರ್ಥಿಗಳು ಜುಲೈ 1 ರಿಂದ ಸಂಬಂಧಿಸಿದ ದಾಖಲೆಗಳನ್ನು ಬಯೋಮೆಟ್ರಿಕ್ ದೃಢೀಕರಣದೊಂದಿಗೆ, ಆನ್‌ಲೈನ್ ಅಥವಾ ಮುದ್ಧಾಂ/ನೊಂದಾಯಿತ ಅಂಚೆ ಮೂಲಕ, ಆಯುಕ್ತರು ಧಾರ್ಮಿಕ ದತ್ತಿ ಇಲಾಖೆ ಇವರ ಕಚೇರಿಗೆ ಸಲ್ಲಿಸಬೇಕಿದೆ. ವ್ಯವಸ್ಥಾಪಕರು ಕರ್ನಾಟಕ ರಾಜ್ಯ ಛತ್ರ, ವಾರಣಾಸಿ ಇವರ ದೃಢೀಕರಣ ಇಲ್ಲದಿದ್ದಲ್ಲಿ ಅಂತಹ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಯಾತ್ರಾರ್ಥಿಗಳು ಸಹಾಯಧನವನ್ನು ಒಂದು ಬಾರಿ ಪಡೆದ ನಂತರದಲ್ಲಿ, ಅದೇ ವ್ಯಕ್ತಿಗೆ ಎರಡನೇ ಬಾರಿ ಅನುದಾನ ನೀಡಲು ಪರಿಗಣಿಸಲಾಗುವುದಿಲ್ಲ. ಸರ್ಕಾರದ ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸುವ ಯಾತ್ರಾರ್ಥಿಗಳ ಬ್ಯಾಂಕ್ ಖಾತೆಯು ರಾಷ್ಟ್ರೀಕೃತ ಬ್ಯಾಂಕಿನ ಖಾತೆಯಾಗಿರಬೇಕು ಮತ್ತು ಕಡ್ಡಾಯವಾಗಿ ಆಧಾರ್ ಲಿಂಕ್ ಆಗಿರಬೇಕಿದೆ.
ಕಾಶಿ ಯಾತ್ರೆಗೆ ವಿಶೇಷ ರೈಲು
30 ಸಾವಿರ ಜನರಿಗೆ ತಲಾ 5 ಸಾವಿರದಂತೆ ಸಹಾಯಧನ ನೀಡುವ ಯೋಜನೆ ಅಲ್ಲದೆ, ಮತ್ತೊಂದು ವಿಶೇಷ ಯೋಜನೆಯನ್ನು ಮುಜರಾಯಿ ಇಲಾಖೆ ಅನುಷ್ಠಾನಗೊಳಿಸುತ್ತಿದೆ.
ಕೇಂದ್ರ ಸರ್ಕಾರದ “ಭಾರತ ಗೌರವ” ಯೋಜನೆಯ ಅಡಿಯಲ್ಲಿ ಮುಜರಾಯಿ ಇಲಾಖೆಯ ರೈಲ್ವೇ ಇಲಾಖೆಯೊಂದಿಗೆ ಒಪ್ಪಂದ ಮಾಡಿಕೊಂಡಿದ್ದು, ಕಾಶಿಗೆ ವಿಶೇಷ ರೈಲಿನ ಕಾರ್ಯಾಚರಣೆ ಸದ್ಯದಲ್ಲೇ ಪ್ರಾರಂಭಿಸಲು ಸಿದ್ದತೆಗಳನ್ನು ಭರದಿಂದ ಮಾಡಿಕೊಳ್ಳಲಾಗುತ್ತಿದೆ. ಈ ನಿಟ್ಟಿನಲ್ಲಿ ಈಗಾಗಲೇ ರೈಲ್ವೇ ಇಲಾಖೆಯಲ್ಲಿ ನೋಂದಣಿ ಮಾಡಿಸಿದ್ದು ಇನ್ನು ಕೆಲವೇ ತಿಂಗಳುಗಳಲ್ಲಿ ಯೋಜನೆ ಕಾರ್ಯಗತಗೊಳ್ಳಲಿದೆ ಎಂದು ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.