ಅಂಕೋಲಾ: ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಹೆದ್ದಾರಿ ಮಾರ್ಗದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಜುಲೈ 16ರಂದು ಗುಡ್ಡ ಕುಸಿತ ಸಂಭವಿಸಿತ್ತು. ಘಟನೆಯಲ್ಲಿ 10 ಜನರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ರಸ್ತೆಯಲ್ಲಿ ಭಾರಿ ಪ್ರಮಾಣದಲ್ಲಿ ಮಣ್ಣು ಬಿದ್ದಿದ್ದು, ಮಳೆಯ ನಡುವೆಯೂ ಮಣ್ಣು ತೆರವು ಕಾರ್ಯಾಚರಣೆ ಕಳೆದ ಐದು ದಿನಗಳಿಂದ ನಿರಂತರವಾಗಿ ನಡೆಯುತ್ತಿದೆ.
ಒಂದೆಡೆ ಮಣ್ಣು ತೆರವು ಕಾರ್ಯಾಚರಣೆ ನಡೆಯುತ್ತಿದ್ದರೂ ಮತ್ತೆ ಅದೇ ಜಾಗದಲ್ಲಿ ಗುಡ್ಡ ಕುಸಿಯುವ ಆತಂಕ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಸೆಕ್ಷನ್ 144 ಅಡಿಯಲ್ಲಿ ನಿಷೇಧಾಜೆ ಜಾರಿಗೊಳಿಸಲಾಗಿದೆ.
ಹೆದ್ದಾರಿಯಲ್ಲಿ ಒಂದು ಭಾಗ ರಸ್ತೆಯ ಮೇಲಿನ ಮಣ್ಣು ಮಾತ್ರ ತೆರವು ಮಾಡಲಾಗಿದೆ. ಇನ್ನೊಂದು ಭಾಗದಲ್ಲಿ ಮಣ್ಣು ತೆರವು ಕಾರ್ಯ ಮುಂದುವರೆದಿದೆ. ಮತ್ತೆ ಗುಡ್ಡ ಕುಸಿಯುವ ಆತಂಕ ಹಿನ್ನೆಲೆಯಲ್ಲಿ ಅರ್ಧ ಕಿ.ಮೀ ವ್ಯಾಪ್ತಿಯಲ್ಲಿ ಇಂದು ಸಂಜೆ 6 ಗಂಟೆಯವರಿಗೆ ನಿಷೇಧಾಜ್ಞೆ ಜಾರಿಗೊಳಿಸಿ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಶಿರೂರು ಗುಡ್ದ ಕುಸಿತ ಮಾರ್ಗದಲ್ಲಿ ವಾಹನ ಸಂಚಾರ, ಸಾರ್ವಜನಿಕ ಪ್ರವೇಶವನ್ನು ಸಂಜೆವರೆಗೆ ನಿಷೇಧಿಸಲಾಗಿದೆ.