ಅಂಕೋಲಾ: ಶಿರೂರು ಬಳಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಸಿಎಂ ಸಿದ್ದರಾಮಯ್ಯ ದುರಂತದಲ್ಲಿ ಮೃತಪಟ್ಟ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಜುಲೈ 16ರಂದು ಗುಡ್ಡ ಕುಸಿತ ಸಂಭವಿಸಿತ್ತು. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ, ಖುದ್ದು ಸ್ಥಳ ಪರಿಶೀಲಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಗುಡ್ಡ ಕುಸಿತ ದುರಂತದಲ್ಲಿ 10 ಜನರು ನಾಪತ್ತೆಯಾಗಿದ್ದಾರೆ. ಅವರಲ್ಲಿ ಈವರೆಗೆ 7 ಜನರ ಮೃತದೇಹ ಪತ್ತೆಯಾಗಿದೆ. ಇನ್ನೂ ಮೂವರ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ. ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ ಎಂದು ಹೇಳಿದರು.
ಗುಡ್ಡ ಕುಸಿತದಲ್ಲಿ ಹಲವರು ಕುಟುಂಬ ಸದಸ್ಯರನ್ನು ಕಳೆದುಕೊಂಡಿದ್ದಾರೆ. ನೀವು ಭರಿಸುವ ಶಕ್ತಿಯನ್ನು ದೇವರು ನೀಡಲಿ. ಮೃತರ ಕುಟುಂಬಕ್ಕೆ ನಾವು ಎಷ್ಟೇ ಧೈರ್ಯ, ಪರಿಹಾರ ನೀಡಿದರೂ ಕಳೆದುಕೊಂಡವರನ್ನು ವಾಪಾಸ್ ತರಲಾಗದು. ಆದರೂ ಸರ್ಕಾರದಿಂದ ತಲಾ 5 ಲಕ್ಷ ಪರಿಹಾರ ನೀಡಲಾಗುವುದು ಎಂದರು.
ಇದೇ ವೇಳೆ ಅವೈಜ್ಞಾನಿಕ ಹೆದ್ದಾರಿ ಕಾಮಗಾರಿಯಿಂದ ಗುಡ್ಡ ಕುಸಿತ ಸಂಭವಿಸಿರುವ ಆರೋಪ ಕೇಳಿಬಂದಿದೆ. ಯಾರೇ ತಪ್ಪು ಮಾಡಿದರೂ ಕ್ರಮ ಕೈಗೊಳ್ಳಲಾಗುವುದು ರಕ್ಷಣಾ ಕಾರ್ಯಾಚರಣೆ ಮುಗಿದ ಬಳಿಕ ತನಿಖೆ ನಡೆಸಿ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.