ಬೆಂಗಳೂರು: ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ವರುಣಾರ್ಭಟಕ್ಕೆ ಸೃಷ್ಟಿಯಾಗಿರುವ ಅನಾಹುತ, ಅವಾಂತರಗಳು ಒಂದೆರಡಲ್ಲ. ಶಿರೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ ದುರಂತದಲ್ಲಿ 10 ಜನರು ಸಾವನ್ನಪ್ಪಿದ್ದು, ಘಟನಾ ಸ್ಥಳಕ್ಕೆ ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಈ ವಿಷಯ ತಿಳಿಸಿದ್ದಾರೆ. ನಾಳೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಗ್ರಾಮಕ್ಕೆ ಭೇಟಿ ನೀಡುತ್ತೇನೆ. ಶಿರೂರು ಹೆದ್ದಾರಿಯಲ್ಲಿ ಗುಡ್ಡ ಕುಸಿತ ಸಂಭವಿಸಿ ಅನಾಹುತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇನೆ ಎಂದು ತಿಳಿಸಿದರು.
ರಾಜ್ಯದ ಹಲವೆಡೆ ಭಾರಿ ಮಳೆಯಿಂದಾಗಿ ಗುಡ್ಡ ಕುಸಿತ, ಮನೆ ಹಾನಿ, ಬೆಳೆ ಹಾನಿ, ರಸ್ತೆ ಸಂಪರ್ಕ ಕಡಿತದಂತಹ ಘಟನೆಗಳು ನಡೆದಿವೆ. ಸಚಿವರು, ಶಾಸಕರು, ಅಧಿಕಾರಿಗಳು ಘಟನಾ ಸ್ಥಳಗಳಿಗೆ ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆ, ಪರಿಹಾರ ನೀಡುವ ಕೆಲ ಮಾಡುತ್ತಿದ್ದಾರೆ ಎಂದರು.
ಇದೇ ವೇಳೆ ಶಿರೂರು ಗುಡ್ಡ ಕುಸಿತ ಸ್ಥಳಕ್ಕೆ ಇಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಭೇಟಿ ವಿಚಾರವಾಗಿ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಕುಮಾರಸ್ವಾಮಿಯವರೂ ಭೇಟಿ ಕೊಟ್ಟು ಪರಿಶೀಲಿಸಲಿ. ನಾನು, ನಮ್ಮ ಸಚಿವರು ಕೂಡ ಶಿರೂರಿಗೆ ಭೇತಿ ಕೊಟ್ಟು ಪರಿಶೀಲನೆ ನಡೆಸುತ್ತೇವೆ ಎಂದು ಹೇಳಿದರು.