ಬೆಂಗಳೂರು: ಶಿವಮೊಗ್ಗದಲ್ಲಿ ನಿರ್ಮಿಸಲಾಗಿರುವ ನೂತನ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಹಾಗೂ ರೈಲ್ವೆ ನಿಲ್ದಾಣಕ್ಕೆ ಶಿವಪ್ಪ ನಾಯಕ ಹೆಸರಿಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಿದ್ದು, ಈ ಕುರಿತಾಗಿ ಕೇಂದ್ರಕ್ಕೆ ಶಿಫಾರಸು ಮಾಡಲು ನಿರ್ಧರಿಸಲಾಗಿದೆ.
ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಹಲವು ನಾಯಕರು, ಮಹನೀಯರ ಹೆಸರಿಡಬೇಕೆಂಬ ಒತ್ತಾಯ ಕೇಳಿ ಬಂದಿತ್ತು. ಯಡಿಯೂರಪ್ಪ ಅವರೇ ಕುವೆಂಪು ಹೆಸರಿಡಬೇಕೆಂದು ಸಲಹೆ ನೀಡಿದ್ದು, ಅವರ ಸಲಹೆಯನ್ನು ಪರಿಗಣಿಸಿದ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ಕೇಂದ್ರಕ್ಕೆ ಶಿಫಾರಸು ಮಾಡಲು ತೀರ್ಮಾನ ಕೈಗೊಂಡಿದೆ.
ಫೆಬ್ರವರಿ 27ರಂದು ಪ್ರಧಾನಿ ನರೇಂದ್ರ ಮೋದಿ ವಿಮಾನ ನಿಲ್ದಾಣ ಉದ್ಘಾಟನೆಗೆ ಶಿವಮೊಗ್ಗಕ್ಕೆ ಆಗಮಿಸಲಿದ್ದು, ಅವರಿಂದಲೇ ಕುವೆಂಪು ವಿಮಾನ ನಿಲ್ದಾಣ ಎಂದು ಘೋಷಣೆ ಮಾಡಿಸಬೇಕೆಂಬ ಅಭಿಲಾಷೆಯನ್ನು ಸರ್ಕಾರ ಹೊಂದಿದೆ.
ಶಿವಮೊಗ್ಗ ರೈಲ್ವೆ ನಿಲ್ದಾಣಕ್ಕೆ ಕೆಳದಿ ಶಿವಪ್ಪ ನಾಯಕರ ಹೆಸರಿಡಲು ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿದ್ದು, ಈ ಕುರಿತಾಗಿಯೂ ಕೇಂದ್ರಕ್ಕೆ ಶಿಫಾರಸು ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ.