ಶಿವಮೊಗ್ಗ: ಕೊನೆಯವರೆಗೂ ಕುತೂಹಲ ಮೂಡಿಸಿದ್ದ ಶಿವಮೊಗ್ಗ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ಅಚ್ಚರಿಯ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಪಾಲಿಕೆ ಸದಸ್ಯರಾಗಿ, ಆಡಳಿತ ಪಕ್ಷದ ನಾಯಕನಾಗಿ, ಉಪಮೇಯರ್ ಆಗಿ ಕಾರ್ಯನಿರ್ವಹಿಸಿರುವ ಮತ್ತು ಬಿಜೆಪಿ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಎಸ್.ಎನ್. ಚನ್ನಬಸಪ್ಪ ಅವರಿಗೆ ಬಿಜೆಪಿ ಟಿಕೆಟ್ ಘೋಷಣೆಯಾಗಿದೆ.
ಮಾಜಿ ಶಾಸಕ ಹೆಚ್.ಎಂ. ಚಂದ್ರಶೇಖರಪ್ಪ ಅವರ ಪುತ್ರ ಹಾಗೂ ಪಾಲಿಕೆ ಸದಸ್ಯ ಹೆಚ್.ಸಿ. ಯೋಗೇಶ್ ಅವರಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಲಾಗಿದೆ. ಯೋಗೀಶ್ ಅವರ ತಾತ ಮಲ್ಲಿಕಾರ್ಜುನ ಕೂಡ ಶಾಸಕರಾಗಿ ಕಾರ್ಯನಿರ್ವಹಿಸಿದ್ದರು ಎಂಬುದು ವಿಶೇಷ. ಯೋಗೇಶ್ ಪಶ್ಚಿಮ ಬಂಗಾಳ ಯುವ ಕಾಂಗ್ರೆಸ್ ಉಸ್ತುವಾರಿಯಾಗಿದ್ದರು.
ಇನ್ನು ಕೆ.ಎಸ್. ಈಶ್ವರಪ್ಪ ವಿರುದ್ಧ ರಣಕಹಳೆ ಮೊಳಗಿಸಿದ್ದ ಮತ್ತು ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಸಂಸದ ಆಯನೂರು ಮಂಜುನಾಥ್ ಅಚ್ಚರಿಯ ಬೆಳವಣಿಗೆಯಲ್ಲಿ ಜೆಡಿಎಸ್ ನಿಂದ ಸ್ಪರ್ಧಿಸಲಿದ್ದಾರೆ. ವಿಧಾನಸಭೆ, ವಿಧಾನ ಪರಿಷತ್, ಲೋಕಸಭೆ, ರಾಜ್ಯಸಭೆ ಹೀಗೆ ನಾಲ್ಕು ಸದನಗಳಲ್ಲಿಯೂ ಸದಸ್ಯರಾಗಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿರುವ ಆಯನೂರು ಮಂಜುನಾಥ್ ಜೆಡಿಎಸ್ ನಿಂದ ಕಣಕ್ಕಿಳಿದಿದ್ದಾರೆ. ಈ ಮೂವರು ಲಿಂಗಾಯಿತ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಇಂದು ನಾಮಪತ್ರ ಸಲ್ಲಿಕೆ ಕೊನೆ ದಿನವಾಗಿದ್ದು, ಶಿವಮೊಗ್ಗ ರಾಜಕೀಯ ಕಣ ರಂಗೇರಿದೆ.