ಶಿವಮೊಗ್ಗ: ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ಶಿವಮೊಗ್ಗದಲ್ಲಿ ಇಂದಿನಿಂದ ಎರಡು ದಿನಗಳ ಕಾಲ ನಡೆಯಲಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಜಿಲ್ಲೆಯಲ್ಲಿ ನಡೆಯುವ ಬಿಜೆಪಿ ಸಭೆಯಲ್ಲಿ ಕೃಷಿ ಮಸೂದೆ, ಗೋಹತ್ಯೆ ವಿಚಾರ, ಅಯೋಧ್ಯೆ ರಾಮಮಂದಿರ ವಿಚಾರ ಚರ್ಚೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಜಿಲ್ಲಾ ಪಂಚಾಯಿತಿ ತಾಲ್ಲೂಕು ಪಂಚಾಯಿತಿ ಚುನಾವಣೆ ಸಿದ್ಧತೆ ಬಗ್ಗೆ ಚರ್ಚೆ ನಡೆಯಲಿದೆ. ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸೇರಿದಂತೆ ಕೇಂದ್ರ, ರಾಜ್ಯ ನಾಯಕರು ಸಭೆಯಲ್ಲಿ ಭಾಗಿಯಾಗಲಿದ್ದಾರೆ. ನಾಯಕತ್ವ ಬದಲಾವಣೆ ಇಲ್ಲವೆಂದು ಈಗಾಗಲೇ ಪಕ್ಷದ ನಾಯಕರು ಸ್ಪಷ್ಟಪಡಿಸಿದ್ದು, ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಪದೇ ಪದೇ ವಿಚಾರ ಪ್ರಸ್ತಾಪಿಸುತ್ತಿರುವುದರಿಂದ ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.