ಶಿವಮೊಗ್ಗ: ಕೋವಿಡ್ ಮೂರನೇ ಅಲೆ ತಡೆಯಲು ಸರ್ಕಾರ ಈಗಾಗಲೇ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಕೋವಿಡ್ ನಿರ್ವಹಣೆ ಕುರಿತು ಪರಿಶೀಲನಾ ಸಭೆ ನಡೆಸಿದ ಅವರು, ಮೂರನೇ ಅಲೆ ತಡೆಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅಧ್ಯಯನ ನಡೆಸಲು ಡಾ. ದೇವಿಪ್ರಸಾದ್ ಶೆಟ್ಟಿ ನೇತೃತ್ವದಲ್ಲಿ ತಜ್ನರ ಸಮಿತಿ ರಚಿಸಲಾಗಿದೆ. ಮೂರ್ನಾಲ್ಕು ದಿನಗಳಲ್ಲಿ ಸಮಿತಿ ವರದಿ ನೀಡಲಿದೆ. ಅದರಂತೆ ಸೂಕ್ತ ಕ್ರಮಗಳನ್ನು ಸರ್ಕಾರ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ವೈದ್ಯಕೀಯ ಮೂಲಸೌಲಭ್ಯ ಹೆಚ್ಚಿಸಲಾಗುತ್ತಿದೆ. ಇದೇ ಮೊದಲ ಬಾರಿಗೆ 1780 ವೈದ್ಯರನ್ನು ನೇರ ನೇಮಕಾತಿ ಮಾಡಲಾಗಿದೆ. ಶಿವಮೊಗ್ಗ ಜಿಲ್ಲೆಗೆ 83 ವೈದ್ಯರನ್ನು ನೇಮಕ ಮಾಡಲಾಗಿದೆ. ಜಿಲ್ಲೆಯ ಆರೋಗ್ಯ ಕ್ಷೇತ್ರದಲ್ಲಿ ಇನ್ನಷ್ಟು ಸುಧಾರಣೆ ತರುವ ಕುರಿತು ಆರೋಗ್ಯ ಸಚಿವರು ಇನ್ನೊಮ್ಮೆ ಜಿಲ್ಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಲು ಸೂಚನೆ ನೀಡಲಾಗಿದೆ ಎಂದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ. ಸುಧಾಕರ್, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ, ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು, ಲೋಕಸಭಾ ಸದಸ್ಯ ಬಿ.ವೈ. ರಾಘವೇಂದ್ರ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೆಲ್ವಕುಮಾರ್ ಮತ್ತಿತರರು ಉಪಸ್ಥಿತರಿದ್ದರು.