
ಶಿವಮೊಗ್ಗ: ಕೋಲಾರದ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಬೆಂಗಳೂರಿನ ಪೀಣ್ಯದ ಸರ್ಕಾರಿ ಶಾಲೆ ಬಳಿಕ ಇದೀಗ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ತವರು ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿಯೇ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ವಿದ್ಯಾರ್ಥಿನಿಯರಿಂದಲೇ ಶಾಲಾ ಶೌಚಾಲಯವನ್ನು ಸ್ವಚ್ಛಗೊಳಿಸಿರುವ ಘಟನೆ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಗುಡ್ಡದ ನೇರಲೆಕೆರೆ ಶಾಲೆಯಲ್ಲಿ ಶಿಕ್ಷಕರು ವಿದ್ಯಾರ್ಥಿಗಳಿಂದಲೇ ಶೌಚಾಲಯಯವನ್ನು ಸ್ವಚ್ಛಗೊಳಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ವೈರಲ್ ಆಗಿದೆ.
ಹೆಡ್ ಮಾಸ್ಟರ್ ಶಂಕರಪ್ಪ, ಸಹಶಿಕ್ಷಕರ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿಕ್ಷಕರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.
ಶಾಲೆಗಳಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛತೆ ಮಾಡಿಸುವಂತಿಲ್ಲ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸ್ವತಃ ಶಿಕ್ಷಣ ಸಚಿವ ಮಧು ಬಂಗಾರಪ್ಪ ಎಚ್ಚರಿಕೆ ನೀಡಿದ್ದಾರೆ. ಆದಾಗ್ಯೂ ಇಂತಹ ಘಟನೆಗಳು ಮರುಕಳಿಸುತ್ತಿರುವುದು ದುರಂತ.