ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕು ಹೊಳೆಹೊನ್ನೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯನೊಬ್ಬ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ್ದು, ಮಹಿಳೆ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ವೈದ್ಯನ ವಿರುದ್ಧ ಹೊಳೆಹೊನ್ನೂರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹೊಳೆಹೊನ್ನೂರು ಆರೋಗ್ಯ ಕೇಂದ್ರದ ವೈದ್ಯ ಮಹಿಳೆಯನ್ನು ಕೊಠಡಿಗೆ ಕರೆಸಿಕೊಂಡು ಲೈಂಗಿಕ ಕಿರುಕುಳ ನೀಡುತ್ತಿದ್ದ. ಕೆಲಸದ ಸಮಯದಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದ. ನವೆಂಬರ್ 12 ರಂದು ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ ಎಂದು ಹೇಳಲಾಗಿದೆ.
ಆರೋಗ್ಯ ಕೇಂದ್ರದಲ್ಲಿ 30 ನಿದ್ದೆ ಮಾತ್ರೆಗಳನ್ನು ಸೇವಿಸಿ ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದು, ವಿಷಯ ತಿಳಿದ ಆಸ್ಪತ್ರೆಯ ಸಿಬ್ಬಂದಿ ಮಹಿಳೆ ಕುಟುಂಬದವರಿಗೆ ತಿಳಿಸಿ ಆಂಬುಲೆನ್ಸ್ ನಲ್ಲಿ ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಚಿಕಿತ್ಸೆ ನಂತರ ಮಹಿಳೆ ಚೇತರಿಸಿಕೊಳ್ಳುತ್ತಿದ್ದು, ಆರೋಗ್ಯ ಕೇಂದ್ರದ ದಂತವೈದ್ಯ ಮತ್ತು ಆರೋಗ್ಯ ಸಮಿತಿ ಸದಸ್ಯೆ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.