ಶಿವಮೊಗ್ಗ: ಶಿವಮೊಗ್ಗಕ್ಕೆ ಕ್ಯಾನ್ಸರ್ ಆಸ್ಪತ್ರೆ ಮಂಜೂರಾಗಿದ್ದು, ಸದ್ಯದಲ್ಲೇ ಶಿಲಾನ್ಯಾಸ ಆಗಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಮುಂಭಾಗದ ಆವರಣದಲ್ಲಿ ಇಂದು ಏರ್ಪಡಿಸಲಾಗಿದ್ದ ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕೋವಿಡ್ ಸಮಯದಲ್ಲಿ ಎಲ್ಲ ಮೆಡಿಕಲ್ ಕಾಲೇಜುಗಳಲ್ಲಿ ನರ್ಸಿಂಗ್ ಕಾಲೇಜು ತೆರೆಯಬೇಕೆಂಬ ನೂತನ ನೀತಿ ರೂಪಿಸಲಾದನ್ವಯ ಶಿವಮೊಗ್ಗದಲ್ಲಿ ಇಂದು ಕಾಲೇಜು ಉದ್ಘಾಟನೆಗೊಂಡು 100 ನರ್ಸಿಂಗ್ ವಿದ್ಯಾರ್ಥಿಗಳ ದಾಖಲಾತಿಗೆ ಕೇಂದ್ರದಿಂದ ಅನುಮೋದನೆ ದೊರೆತಿದೆ.
50 ಕೋಟಿ ಜನರಿಗೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆ ಮೂಲಕ ಉಚಿತವಾಗಿ ಆರೋಗ್ಯ ವಿಮೆ ನೀಡಿದ ಏಕೈಕ ದೇಶ ನಮ್ಮದು. ಪ್ರಾಥಮಿಕ ಮತ್ತು ದ್ವಿತೀಯ ಹಂತದ ಚಿಕಿತ್ಸೆಗಳು ಇತರೆ ಆಸ್ಪತ್ರೆಗಳಲ್ಲಿ ದೊರೆತರೆ ತೃತೀಯ ಹಂತದ ಚಿಕಿತ್ಸೆ ವೈದ್ಯಕೀಯ ಕಾಲೇಜುಗಳಿರುವೆಡೆ ಲಭಿಸುತ್ತದೆ. ಗುಣಮಟ್ಟದ ಸೇವೆ ನೀಡದಿದ್ದಲ್ಲಿ ಜನರು ಖಾಸಗಿ ಆಸ್ಪತ್ರೆಗೆ ಹೋಗುತ್ತಾರೆ. ಹಾಗಾಗದಂತೆ ನೋಡಿಕೊಳ್ಳಬೇಕು. ಸರ್ಕಾರಿ ಆಸ್ಪತ್ರೆಗಳು ಮತ್ತು ವೈದ್ಯಕೀಯ ಕಾಲೇಜಿನ ಆಸ್ಪತ್ರೆಗಳು ಸಂಜೀವಿನಿ ಆಗಿ ಸೇವೆ ಸಲ್ಲಿಸಬೇಕು ಎಂದರು.
ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಾತನಾಡಿ, ಇನ್ನು ಆರೇಳು ತಿಂಗಳಲ್ಲಿ ವಿಮಾನ ನಿಲ್ದಾಣ ಕಾಮಗಾರಿ ಮುಗಿಯಲಿದ್ದು, ಪ್ರಧಾನಿ ಮೋದಿಯವರನ್ನು ಬೆಂಗಳೂರಿನಿಂದ ಶಿವಮೊಗ್ಗಕ್ಕೆ ವಿಮಾನದಲ್ಲೇ ಕರೆತಂದು ಉದ್ಘಾಟನೆ ಮಾಡಿಸುವ ಅಪೇಕ್ಷೆ ಇದೆ ಎಂದರು.
ಸಂಸದ ಬಿ.ವೈ.ರಾಘವೇಂದ್ರ, ಗೃಹ ಸಚಿವ ಆರಗ ಜ್ಞಾನೇಂದ್ರ, ನಗರಾಭಿವೃದ್ದಿ ಸಚಿವ ಬೈರತಿ ಬಸವರಾಜ, ಪಾಲಿಕೆ ಮಹಾಪೌರರಾದ ಸುನೀತ ಅಣ್ಣಪ್ಪ, ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಜಿ.ಪಂ ಸಿಇಓ ಎಂ.ಎಲ್. ವೈಶಾಲಿ, ಸಿಮ್ಸ್ ನಿರ್ದೇಶಕ ಡಾ.ಸಿದ್ದಪ್ಪ, ಡಾ.ಶ್ರೀಧರ್, ಡಾ. ರಾಜೇಶ್ ಸುರಗಿಹಳ್ಳಿ, ಡಾ.ಸಿದ್ದನಗೌಡ ಪಾಟಿಲ್, ಸಿಮ್ಸ್ ಆಡಳಿತ ಮಂಡಳಿ ಸದಸ್ಯರಾದ ಡಾ.ವಾಣಿ ಕೋರಿ, ಡಾ.ಗೌತಮ್, ದಿವಾಕರ್ ಶೆಟ್ಟಿ ಇತರರು ಉಪಸ್ಥಿತರಿದ್ದರು.