ಶಿವಮೊಗ್ಗ: ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ವರುಣಾರ್ಭಟ ಜೋರಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ನಡುವೆ ನಾಳೆ ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಹಲವೆಡೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ರಾಜ್ಯದ ಹಲವೆಡೆ ಜುಲೈ 19ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಶಿವಮೊಗ್ಗ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಹಲವೆಡೆ ಗುಡ್ಡ ಕುಸಿತಗೊಂಡಿದೆ. ಇನ್ನು ಹಲವೆಡೆ ರಸ್ತೆಗಳು ಜಲಾವೃತಗೊಂಡು ಅವಾಂತರ ಸೃಷ್ಟಿಯಾಗಿದೆ.
ಭಾರಿ ಮಳೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜುಲೈ 16ರಂದು ಜಿಲ್ಲೆಯ ಸಾಗರ, ಹೊಸನಗರ ತಾಲೂಕುಗಳ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಸಾಗರ ತಾಲೂಕಿನಾದ್ಯಂತ ನಿರಂತರವಾಗಿ ಮಳೆ ಮುಂದುವರೆದಿದ್ದು, ಈ ಹಿನ್ನೆಲೆಯಲ್ಲಿ ಜುಲೈ 16ರಂದು ನಾಳೆ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ತಹಶೀಲ್ದಾರ್ ಚಂದ್ರಶೇಖರ ನಾಯಕ್ ತಿಳಿಸಿದ್ದಾರೆ.