alex Certify ಶಿವಮೊಗ್ಗದಲ್ಲಿ ಕಿದ್ವಾಯಿ ಮಾದರಿ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವಮೊಗ್ಗದಲ್ಲಿ ಕಿದ್ವಾಯಿ ಮಾದರಿ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ

ಶಿವಮೊಗ್ಗ: ಶಿವಮೊಗ್ಗದಲ್ಲಿ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣದಿಂದ ಸುತ್ತಮುತ್ತಲಿನ ಜಿಲ್ಲೆಯ ಜನ ಸಾಮಾನ್ಯರಿಗೆ ಅತ್ಯಂತ ಉಪಯೋಗವಾಗಲಿದ್ದು, ಗುಣಮಟ್ಟದ ಕಾಮಗಾರಿಯೊಂದಿಗೆ ಶೀಘ್ರದಲ್ಲಿ ಸೇವೆಗೆ ಲಭ್ಯವಾಗಲಿದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ದಿ ಸಚಿವ ಡಾ.ಶರಣಪ್ರಕಾಶ ಆರ್. ಪಾಟೀಲ ಹೇಳಿದ್ದಾರೆ.

ಇಂದು ಮೆಗ್ಗಾನ್ ಆಸ್ಪತ್ರೆ ಬಳಿ ನೂತನವಾಗಿ ಆರಂಭಿಸಲಾಗುತ್ತಿರುವ ಕಿದ್ವಾಯಿ ಮಾದರಿ ಕ್ಯಾನ್ಸರ್ ಆಸ್ಪತ್ರೆಯ ಕಟ್ಟಡ ಕಾಮಗಾರಿ ಚಾಲನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ, ಮೆಗ್ಗಾನ್ ಆಸ್ಪತ್ರೆಯಲ್ಲಿ ಕ್ಯಾನ್ಸರ್ ಆಸ್ಪತ್ರೆಯಿಂದಾಗಿ ಸುತ್ತಮುತ್ತಲಿನ ಜನರಿಗೆ ಅನುಕೂಲವಾಗಲಿದೆ. ಆಸ್ಪತ್ರೆ ಸಿವಿಲ್ ಕಾಮಗಾರಿಗೆ 50 ಕೋಟಿ ರೂ. ಮಂಜೂರಾಗಿದ್ದು, 120 ಬೆಡ್ ಸಾಮರ್ಥ್ಯದ ಆಸ್ಪತ್ರೆ ನಿರ್ಮಾಣವಾಗಲಿದೆ. ಕೀಮೊ, ರೇಡಿಯೋ ಥೆರಪಿ ಸೇರಿದಂತೆ ಅಗತ್ಯವಾದ ಎಲ್ಲ ವ್ಯವಸ್ಥೆಯನ್ನು ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಮೆಗ್ಗಾನ್ ಆಸ್ಪತ್ರೆಯ ಸೂಪರ್ ಸ್ಪೆಷಾಲಿಟಿ ವಿಭಾಗದ ಕಾರ್ಡಿಯಾಲಜಿ ಘಟಕದಲ್ಲಿ ಆಂಜಿಯೋಗ್ರಾಮ್, ಆಂಜಿಯೋಪ್ಲಾಸ್ಟಿ ಸೇವೆ ನೀಡಲಾಗುತ್ತಿದ್ದು, ಪೂರ್ಣ ಪ್ರಮಾಣದ ಕಾರ್ಯಾಚರಣೆ ಕುರಿತು ಪರಿಶೀಲಿಸಿ, ಅಭಿವೃದ್ದಿಗೆ ಪ್ರಯತ್ನಿಸಲಾಗುವುದು. ಬಡವರ ಮಕ್ಕಳು ಸಹ ಡಾಕ್ಟರ್ ಆಗಬೇಕೆಂಬ ಉದ್ದೇಶದಿಂದ ರಾಜ್ಯಾದ್ಯಂತ ಸರ್ಕಾರಿ ಮೆಡಿಕಲ್ ಕಾಲೇಜುಗಳನ್ನು ಸ್ಥಾಪಿಸಲಾಗುತ್ತಿದೆ. ನಮ್ಮ ರಾಜ್ಯದಲ್ಲೇ ಅತ್ಯಧಿಕ 70 ಮೆಡಿಕಲ್ ಕಾಲೇಜುಗಳಿದ್ದು, ಇದರಲ್ಲಿ 25 ಸರ್ಕಾರಿ ಕಾಲೇಜುಗಳಾಗಿವೆ. ಪ್ರತಿ ಜಿಲ್ಲೆಗೊಂದು ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ವಿಭಾಗಗಳ ಕೇಂದ್ರ ಸ್ಥಾನದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸಲಾಗುತ್ತಿದೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಮಾತನಾಡಿ, ಕ್ಯಾನ್ಸರ್ ಆಸ್ಪತ್ರೆಗೆ ನಿರ್ಮಾಣಕ್ಕೆ ಸರ್ಕಾರ 100 ಕೋಟಿ ರೂ. ಮಂಜೂರು ಮಾಡಿದ್ದು, ಆದಷ್ಟು ಬೇಗ, ಗುಣಮಟ್ಟದೊಂದಿಗೆ ಆಸ್ಪತ್ರೆ ನಿರ್ಮಾಣಗೊಂಡು ಸೇವೆಗೆ ಸಿದ್ದವಾಗಬೇಕು ಎಂದು ಹೇಳಿದರು.

ಬೆಂಗಳೂರಿನ ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆಯ ನಿರ್ದೇಶಕ ಡಾ.ಲೋಕೇಶ್ ಮಾತನಾಡಿ, ಪ್ರತಿ ವರ್ಷ ದೇಶದಲ್ಲಿ 14 ಲಕ್ಷ ಹೊಸ ಕ್ಯಾನ್ಸರ್ ರೋಗಿಗಳು ಪತ್ತೆಯಾಗುತ್ತಾರೆ. ರಾಜ್ಯದಲ್ಲಿ ಪ್ರತಿ ವರ್ಷ 80 ಸಾವಿರ ಪತ್ತೆಯಾದರೆ ಶಿವಮೊಗ್ಗ ಸುತ್ತಮುತ್ತ ಜಿಲ್ಲೆಯಲ್ಲಿ ಸುಮಾರು 10 ಸಾವಿರ ಹೊಸ ಕ್ಯಾನ್ಸರ್ ರೋಗಿಗಳು ಪತ್ತೆಯಾಗುತ್ತಾರೆ. ಇಲ್ಲಿ ಕ್ಯಾನ್ಸರ್ ಆಸ್ಪತ್ರೆ ಸ್ಥಾಪನೆಯಿಂದ ಮಧ್ಯ ಕರ್ನಾಟಕ ಭಾಗದ ಸುತ್ತಮತ್ತಲಿನ ಜಿಲ್ಲೆಗಳ ಜನರಿಗೆ ಅನುಕೂಲವಾಗಲಿದೆ. ಇಲ್ಲಿ ಹೊಸ ತಂತ್ರಜ್ಞಾನ ಅಳವಡಿಕೆ, ಅಭಿವೃದ್ದಿಗೆ ಯೋಜನೆ ರೂಪಿಸಿದ್ದೇವೆ ಎಂದರು.

ಶಾಸಕರಾದ ಬೇಳೂರು ಗೋಪಾಲಕೃಷ್ಣ, ಎಸ್.ಎನ್. ಚನ್ನಬಸಪ್ಪ, ಸಂಗಮೇಶ್ವರ್ ಮಾತನಾಡಿದರು.

ಕಾರ್ಯಕ್ರಮದಲ್ಲಿ ಡಿಎಂಇ ಡಾ.ಸುಜಾತಾ ರಾಥೋಡ್, ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಆರ್., ಜಿ.ಪಂ ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ, ಜಿಲ್ಲಾ ಪೊಲಿಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್, ಮುಖ್ಯ ಅಭಿಯಂತರರಾದ ಬಿ.ಕೆ  ಪವಿತ್ರಾ, ಸಿಮ್ಸ್ ನಿರ್ದೇಶಕ ಡಾ. ವಿರೂಪಾಕ್ಷಪ್ಪ, ವೈದ್ಯಕೀಯ ಅಧೀಕ್ಷಕ ಡಾ.ತಿಮ್ಮಪ್ಪ ಇದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...