ಬೆಂಗಳೂರು: ನವೆಂಬರ್ ಒಂದಕ್ಕೆ ಕರ್ನಾಟಕ ಎಂದು ನಾಮಕರಣ ಆಗಿ ಐವತ್ತು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ‘ಕರ್ನಾಟಕ, ಉಸಿರಾಗಲಿ ಕನ್ನಡ’ ಎಂಬ ಘೋಷ ವಾಕ್ಯದೊಂದಿಗೆ ವರ್ಷವಿಡಿ ಕರ್ನಾಟಕ ಸುವರ್ಣ ಮಹೋತ್ಸವವನ್ನು ರಾಜ್ಯಾದ್ಯಂತ ಆಚರಿಸಲಾಗುವುದು.
ಸಾಂಸ್ಕೃತಿಕ ಮತ್ತು ಪರಂಪರೆ ಬಿಂಬಿಸುವ ಕಾರ್ಯಕ್ರಮ ರೂಪಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಕರ್ನಾಟಕ ಸುವರ್ಣ ಮಹೋತ್ಸವ ಆಚರಣೆ ಕುರಿತು ಕಾರ್ಯಕ್ರಮ ರೂಪರೇಷೆ ಸಿದ್ದಪಡಿಸಲು ರಂಗಕರ್ಮಿಗಳು, ಸಾಹಿತಿಗಳು, ಕಲಾವಿದರೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಕರ್ನಾಟಕ ಉಸಿರಾಗಲಿ ಕನ್ನಡ ಎಂಬ ಘೋಷ ವಾಕ್ಯದಡಿ ಕಾರ್ಯಕ್ರಮ ನಡೆಸಲು ಬಜೆಟ್ ನಲ್ಲಿ ಈಗಾಗಲೇ ಘೋಷಣೆ ಮಾಡಲಾಗಿದೆ. ರಾಜ್ಯದ ಕಂದಾಯ ವಿಭಾಗವಾರು ಸಾಹಿತಿಗಳ ಸಭೆ ನಡೆಸಲಾಗುವುದು ಎಂದು ಸಚಿವರು ತಿಳಿಸಿದ್ದು, ಮಂಡ್ಯದಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಎಲ್ಲರೊಂದಿಗೆ ಚರ್ಚೆ ಮಾಡಿ ಸಮ್ಮೇಳನ ದಿನಾಂಕ ನಿಗದಿಪಡಿಸುವುದಾಗಿ ತಿಳಿಸಿದ್ದಾರೆ.