ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿಯಿಂದ ದೂರು ನೀಡಲಾಗಿದೆ.
ಬೆಂಗಳೂರಿನಲ್ಲಿ ರಾಜ್ಯ ಚುನಾವಣಾ ಆಯೋಗಕ್ಕೆ ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ನೇತೃತ್ವದಲ್ಲಿ ಬಿಜೆಪಿ ನಿಯೋಗ ದೂರು ನೀಡಿದೆ.
ದೂರು ನೀಡಿದ ಬಳಿಕ ಮಾತನಾಡಿದ ಶೋಭಾ ಕರಂದ್ಲಾಜೆ, ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ಕಾಂಗ್ರೆಸ್ ವಾಗ್ದಾಳಿ ಮುಂದುವರೆಸಿದೆ. ನಿರಂತರವಾಗಿ ಪ್ರಧಾನಿಯವರಿಗೆ ಅವಮಾನ ಮಾಡಲಾಗುತ್ತಿದೆ ಎಂದು ಆರೋಪಿಸಲಾಗಿದೆ. ನಾಲಾಯಕ್ ಪ್ರಧಾನಮಂತ್ರಿ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಇಂತಹ ಹೇಳಿಕೆ ನೋಡಿದರೆ ಕಾಂಗ್ರೆಸ್ ಸೋಲಿನ ಹತಾಶೆಯಲ್ಲಿದೆ ಎಂದು ತಿಳಿಸಿದ್ದಾರೆ.
ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಸಹ ಸೋಲುವ ಭೀತಿಯಲ್ಲಿದ್ದಾರೆ. ವರುಣಾದಲ್ಲಿ ಬಿಜೆಪಿ ಕಾರ್ಯಕರ್ತ ನಾಗೇಶ್ ಮೇಲೆ ಹಲ್ಲೆ ಮಾಡಿದ್ದಾರೆ. ಇಂದು ಮತ್ತೆ ದಿಲೀಪ್ ಕುಮಾರ್ ಎಂಬುವರ ಮೇಲೆ ಹಲ್ಲೆ ಮಾಡಲಾಗಿದೆ. ಗಾಂಧಿನಗರದಲ್ಲಿಯೂ ಕಾರ್ತಿಕ್, ಅರುಣ್ ಎಂಬುವರ ಮೇಲೆ ದಾಳಿ ನಡೆಸಲಾಗಿದೆ. ಬಿಜೆಪಿಯ ಕಾರ್ಯಕರ್ತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದಿನೇಶ್ ಗುಂಡೂರಾವ್ ಚೇಲಾಗಳು ಆಸ್ಪತ್ರೆಯಲ್ಲಿಯೂ ಬೆದರಿಕೆ ಹಾಕಿದ್ದಾರೆ. ಕಾಂಗ್ರೆಸ್ ಬೆದರಿಕೆಗೆ ಜಗ್ಗುವುದಿಲ್ಲ. ನಾವು ಕಾರ್ಯಕರ್ತರ ಜೊತೆಗೆ ಇದ್ದೇವೆ ಎಂದು ಶೋಭಾ ಕರಂದ್ಲಾಜೆ ಹೇಳಿದ್ದಾರೆ.