ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನ ಬಾಬುಸಾ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬಾಬುಸಾ ಪಾಳ್ಯದಲ್ಲಿ ಅ.22ರಂದು ನಿರ್ಮಾಣ ಹಂತದ ಕಟ್ಟಡ ಕುಸಿದುಬಿದ್ದು 8 ಜನರು ಸಾವನ್ನಪ್ಪಿದ್ದರು. 6 ಜನರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವೈಜ್ಞಾನಿಕವಾಗಿ ಕಟ್ಟಡ ನಿರ್ಮಿಸಿದ್ದೇ ದುರಂತಕ್ಕೆ ಕಾರಣ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ ನಿಯಮಬಾಹಿರವಾಗಿ, ಸೂಕ್ತ ಅನುಮತಿ ಪರವಾನಗಿ ಪಡೆಯದೆ ಕಟ್ಟಡ ನಿರ್ಮಾಣಕ್ಕೆ ಮುಂದಾಗಿರುವವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ವಿಭಾಗೀಯ ಅಧಿಕಾರಿಗೂ ನೋಟಿಸ್ ನೀಡಿ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಅನಧಿಕೃತ ನಿರ್ಮಾಣ ನಿಲ್ಲಿಸುವಂತೆ ನೋಟಿಸ್ ನೀಡಿದ್ದರೂ ನಿರ್ಮಾಣ ಮುಂದುವರೆಸಿದ ಮಾಲೀಕರು, ಗುತ್ತಿಗೆದಾರ, ಎಂಜಿನಿಯರ್ ಎಲ್ಲರ ವಿರುದ್ಧವೂ ಕಠಿಣ ಕಾನೂನು ಕ್ರಮ ಆಗಬೇಕು ಎಂದು ಬಿಬಿಎಂಪಿ ಆಯುಕ್ತ ತುಷಾರ ಗಿರಿನಾಥ್ ಅವರಿಗೆ ಸಿಎಂ ಸೂಚನೆ ನೀಡಿದರು.
ಘಟನಾ ಸ್ಥಳ ಪರಿಶೀಲನೆ ಬಳಿಕ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಅಗತ್ಯ ಇರುವ ಎಲ್ಲಾ ಆಧುನಿಕ ವ್ಯವಸ್ಥೆ ಬಳಿಕ ಕಾರ್ಮಿಕರಿಗೆ ಚಿಕಿತ್ಸೆ ನೀಡುವಂತೆ ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.