![](https://kannadadunia.com/wp-content/uploads/2022/09/siddaramaiah-1-1658341483.jpg)
ರಾಣೆಬೆನ್ನೂರು: ನನ್ನ ವಿರುದ್ಧ ಬಿಜೆಪಿ-ಜೆಡಿಎಸ್ ಸೇಡಿನ ರಾಜಕಾರಣ, ಹೊಟ್ಟೆಕಿಚ್ಚಿನ ಪಿತೂರಿ ನಡೆಯುತ್ತಿದೆ. ಆದರೆ ಜನರ ಆಶಿರ್ವಾದ ಇರುವವರೆಗೂ ನನ್ನನ್ನು ಯಾರೂ ಏನೂ ಮಾಡಲು ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಹಾವೇರಿಯ ರಾಣೆಬೆನ್ನೂರು ತಾಲ್ಲೂಕಿನ ದೇವರಗುಡ್ಡದಲ್ಲಿ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಕಂಚಿನ ಪುತ್ಥಳಿ ಲೋಕಾರ್ಪಣೆ ಹಾಗೂ ಕನಕಭವನ ಉದ್ಘಾಟನೆ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನನ್ನ ವಿರುದ್ಧ ನಡೆಯುತ್ತಿರುವ ಷಡ್ಯಂತ್ರವನ್ನು ಸಹಿಸುತ್ತೀರಾ? ಎಂದು ನೆರೆದಿದ್ದ ಜನಸ್ತೋಮವನ್ನು ಪ್ರಶ್ನಿಸಿದರು.
ಈ ವೇಳೆ ಜನರು ನಾವು ಸಹಿಸಲ್ಲ. ರೊಚ್ಚೆಗೇಳ್ತೇವೆ ಎಂದಿದ್ದಾರೆ. ನಾನು ಜನರ ಆಶೀರ್ವಾದದಿಂದ ಮುಖ್ಯಮಂತ್ರಿಯಾಗಿ ಜನರಿಗೆ ಕೊಟ್ಟ ಮಾತನ್ನು ಈಡೇರಿಸುತ್ತಿದ್ದೇವೆ. ಮೊದಲ ಬಾರಿ ಮುಖ್ಯಮಂತ್ರಿ ಆದಾಗಲೂ ಹಲವು ಭಾಗ್ಯಗಳನ್ನು ಜನರ ಮಡಿಲಿಗೆ ಹಾಕುವ ಮೂಲಕ ನುಡಿದಂತೆ ನಡೆದಿದ್ದೇನೆ. ಎರಡನೇ ಬಾರಿ ಸಿಎಂ ಆಗಿ ಒಂದೇ ವರ್ಷದಲ್ಲಿ ಐದಕ್ಕೆ ಐದೂ ಗ್ಯಾರಂಟಿಗಳನ್ನೂ ಜಾರಿ ಮಾಡಿದ್ದೇವೆ. ಹಾಗಾಗಿ ನನ್ನ ಬಗ್ಗೆ ಹೊಟ್ಟೆಕಿಚ್ಚಿನ ಪಿತೂರಿ ನಡೆದಿದೆ ಎಂದರು.
ನಾನು ಅಸೂಯೆ, ದ್ವೇಷದ ರಾಜಕಾರಣದಿಂದ ಅಧಿಕಾರಕ್ಕೆ ಬಂದಿಲ್ಲ. ಜನರ ಆಶೀರ್ವಾದದಿಂದ ಹಿಂದುಳಿದ ಸಮಾಜದ ಸಿದ್ದರಾಮಯ್ಯ ಸಿಎಂ ಆಗಿರೋದು. ಜನರ ಆಶೀರ್ವಾದ ಇರುವವರೆಗೂ ನನಗೆ ಯಾರೂ ಏನೂ ಮಾಡಲಾಗುವುದಿಲ್ಲ ಎಂದು ವಿಪಕ್ಷಗಳಿಗೆ ಟಾಂಗ್ ನೀಡಿದರು.
ಜಾತಿ ವ್ಯವಸ್ಥೆಯ ಈ ಸಮಾಜದಲ್ಲಿ ಅತ್ಯಂತ ಕಟ್ಟ ಕಡೆಯ ವ್ಯಕ್ತಿಗೂ ಅವಕಾಶ ಸಿಗಬೇಕು ಎಂದು ಮಹಾತ್ಮಗಾಂಧಿ ಹೇಳಿದ್ದರು. ಇದರಲ್ಲಿ ನಂಬಿಕೆ ಇಟ್ಟು ಕಾರ್ಯಕ್ರಮ ರೂಪಿಸುತ್ತಿದ್ದೇನೆ. ಇದೇ ಬಿಜೆಪಿ-ಜೆಡಿಎಸ್ ನವರಿಗೆ ಹೊಟ್ಟೆಕಿಚ್ಚು. ಈ ಹೊಟ್ಟೆಕಿಚ್ಚಿನಿಂದ ಅವರೇ ನಾಶ ಆಗುತ್ತಾರೆಯೇ ಹೊರತು ನನ್ನನ್ನು ಅಲುಗಾಡಿಸಲು ಸಾಧ್ಯವಿಲ್ಲ ಎಂದು ಹೇಳಿದರು.