
ಹುಬ್ಬಳ್ಳಿ: ಸಿಎಂ ಬದಲಾವಣೆ ಮಾಡಿದರೆ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದು ಅಹಿಂದ ರಾಜ್ಯಾಧ್ಯಕ್ಷ ಪ್ರಭುಲಿಂಗ ದೊಡ್ಮನಿ ಹೇಳಿದ್ದಾರೆ.
5 ವರ್ಷಗಳ ಕಾಲ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಆಗಿರಬೇಕು. ಸಿದ್ದರಾಮಯ್ಯನವರಿಂದಲೇ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಕೆಲವು ಸ್ವಾಮೀಜಿಗಳು ಸಿಎಂ ಬದಲಾವಣೆ ಬಗ್ಗೆ ಮಾತನಾಡುತ್ತಿದ್ದಾರೆ. ಇಂತಹ ಹೇಳಿಕೆಗಳು ಧಾರ್ಮಿಕ ವಿಚಾರಗಳಿಗೆ ಧಕ್ಕೆ ತರುತ್ತದೆ. ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬದಲಾವಣೆ ಮಾಡಬಾರದು ಎಂದು ಹೇಳಿದ್ದಾರೆ.
ಸಿಎಂ ಬದಲಾವಣೆ ಆಗಬೇಕು ಎಂದು ಸ್ವಾಮೀಜಿ ಹೇಳಿದ್ದಾರೆ. ಹೀಗಾಗಿ ಅದು ಚಂದ್ರಶೇಖರ ಸ್ವಾಮೀಜಿಯವರ ವೈಯಕ್ತಿಕ ಅಭಿಪ್ರಾಯ. ಮುಖ್ಯಮಂತ್ರಿ ಬದಲಾದರೆ ಕಾಂಗ್ರೆಸ್ ಅಸ್ತಿತ್ವ ಕಳೆದುಕೊಳ್ಳಲಿದೆ. ಅಹಿಂದ ನಾಯಕರನ್ನು ತುಳಿಯುವ ಕೆಲಸ ನಡೆಯುತ್ತಿದೆ ಎಂದು ಪ್ರಭುಲಿಂಗ ಹೇಳಿದ್ದಾರೆ.
ಮುಖ್ಯಮಂತ್ರಿ ಬೆನ್ನೆಲುಬಾಗಿ ನಿಲ್ಲುತ್ತೇವೆ. ಪ್ರತಿ ಜಿಲ್ಲೆಯಲ್ಲಿಯೂ ಅಹಿಂದ ಸಂಘಟನೆ ಇದೆ. ರಾಜ್ಯದ ಜನ ಸಿದ್ದರಾಮಯ್ಯನವರನ್ನು ನೋಡಿ ಕಾಂಗ್ರೆಸ್ ಗೆ ಮತ ಹಾಕಿದ್ದಾರೆ ಎಂದು ಹೇಳಿದ್ದಾರೆ.