ದಾವಣಗೆರೆ: ಮುಖ್ಯಮಂತ್ರಿಯಾಗಿ ಎರಡನೇ ಅವಧಿಯಲ್ಲಿಯೂ ಸಿದ್ದರಾಮಯ್ಯ ಅವರು ಉತ್ತಮ ಕೆಲಸ ಮಾಡಿದ್ದಾರೆ. ಅವರು ಇನ್ನೂ ಮೂರೂವರೆ ವರ್ಷ ಮುಖ್ಯಮಂತ್ರಿ ಆಗಿರಲಿ ಎಂದು ಸಚಿವ ಬೈರತಿ ಸುರೇಶ್ ಹೇಳಿದ್ದಾರೆ.
ದಾವಣಗೆರೆಯಲ್ಲಿ ಭಾನುವಾರ ನಡೆದ ಕನಕ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಮುಖ್ಯಮಂತ್ರಿ ಆಗಿ ಎರಡನೇ ಅವಧಿಯಲ್ಲಿ ಸಿದ್ದರಾಮಯ್ಯ ಉತ್ತಮ ಕೆಲಸ ಮಾಡಿದ್ದು, ಇನ್ನು ಮೂರೂವರೆ ವರ್ಷ ಕಾಲ ಸಿದ್ದರಾಮಯ್ಯನವರನ್ನೇ ಮುಖ್ಯಮಂತ್ರಿಯಾಗಿ ಮುಂದುವರಿಸಬೇಕು. ಇದಕ್ಕೆ ನಾವೆಲ್ಲರೂ ಅವರ ಕೈಗಳನ್ನು ಬಲಪಡಿಸುವ ಕೆಲಸ ಮಾಡೋಣ ಎಂದು ಹೇಳಿದ್ದಾರೆ.
ಚಿತ್ರದುರ್ಗ ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಮಾತನಾಡಿ, ಇದ್ದರೆ ಸಿದ್ದರಾಮಯ್ಯ ನವರಂತಹ ರಾಜನಿರಬೇಕು, ನಿರಂಜನಾನಂದಪುರಿ ಸ್ವಾಮೀಜಿಯಂತಹ ರಾಜಗುರು ಇರಬೇಕು ಎನ್ನುವ ಮೂಲಕ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿ ಮುಂದುವರೆಯಬೇಕೆಂಬ ಇಂಗಿತ ವ್ಯಕ್ತಪಡಿಸಿದ್ದಾರೆ.
ಸಿದ್ದರಾಮಯ್ಯನವರ ಆಡಳಿತವನ್ನು ಶ್ಲಾಘಿಸಿದ ಸ್ವಾಮೀಜಿ, ಅನ್ನ ನೀಡಿದಾತನಿಗೆ ಅಧಿಕಾರ ನೀಡಿದರೆ ನೆಮ್ಮದಿಯಿಂದ ಇರಲು ಸಾಧ್ಯವಿದೆ. ಸಿದ್ದರಾಮಯ್ಯ ಅನ್ನದಾತರಾಗಿದ್ದಾರೆ ಎಂದು ಹೇಳಿದ್ದಾರೆ.