ಹಾವೇರಿ: ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ಚುನಾವಣಾಧಿಕಾರಿಗೆ ದೂರು ನೀಡಲಾಗಿದೆ.
ಸಿ.ಎಂ. ಉದಾಸಿ ಅವರ ವಿರುದ್ಧ ನಿರಾಧಾರ ಆರೋಪ ಮಾಡುವ ಮೂಲಕ ಸಿದ್ದರಾಮಯ್ಯ ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಲಾಗಿದೆ. ಬಿಜೆಪಿ ಕಾನೂನು ಪ್ರಕೋಷ್ಠದ ರಾಜ್ಯ ಸಂಚಾಲಕ ಎಸ್.ಎಸ್. ಮಿಟ್ಟಲಕೋಡ ಅವರು ಹಾನಗಲ್ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗೆ ದೂರು ನೀಡಿದ್ದಾರೆ.
ಹಾನಗಲ್ ತಾಲೂಕಿನಲ್ಲಿ ಅಕ್ಟೋಬರ್ 16 ರಂದು ನಡೆದ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆಯಲ್ಲಿ ಸಿದ್ಧರಾಮಯ್ಯ ಮಾತನಾಡಿ, ಸಿ.ಎಂ. ಉದಾಸಿ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಸಂಗೂರ ಸಕ್ಕರೆ ಕಾರ್ಖಾನೆಯಲ್ಲಿ ಭ್ರಷ್ಟಾಚಾರವೆಸಗಿದ್ದಾರೆ ಎಂದು ಆರೋಪಿಸಿ ಮತದಾರರನ್ನು ತಪ್ಪು ದಾರಿಗೆ ಎಳೆದಿದ್ದಾರೆ. ಈ ಮೂಲಕ ಅಗಲಿದ ನಾಯಕನಿಗೆ ಅಗೌರವ ತೋರಿದ್ದಾರೆ ಎಂದು ಆರೋಪಿಸಲಾಗಿದ್ದು, ಉದ್ದೇಶಪೂರ್ವಕವಾಗಿ ಸುಳ್ಳು ಆರೋಪ ಮಾಡಿ ನೀತಿ ಸಂಹಿತೆ ಉಲ್ಲಂಘಿಸಿದ ಸಿದ್ದರಾಮಯ್ಯ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಲಾಗಿದೆ.